ಭೋಪಾಲ್ : ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 14 ಜನರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರೇವಾ ಬಳಿ ನಿನ್ನೆ ರಾತ್ರಿ 11.30ರ ಸುಮಾರಿಗೆ ನಡೆದಿದೆ. ಹೈದರಾಬಾದ್ನಿಂದ ಗೋರಖ್ ಪುರಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ. ಜಖಂಗೊಂಡ ಬಸ್ಸಿನೊಳಗೆ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರತೆಗೆಯಲಾಯಿತು.
ಈ ಅಪಘಾತದ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಮೃತಪಟ್ಟವರಲ್ಲಿ ಎಲ್ಲಾ ಪ್ರಯಾಣಿಕರು ಉತ್ತರಪ್ರದೇಶ, ಬಿಹಾರ ಮತ್ತು ನೇಪಾಳ ನಿವಾಸಿಗಳಾಗಿದ್ದು, ದೀಪಾವಳಿ ಆಚರಿಸಲು ತಮ್ಮ ಮನೆಗಳಿಗೆ ತೆರಳುತ್ತಿದ್ದರು. ಸಂಬಂಧಪಟ್ಟ ಕುಟುಂಬಗಳಿಗೆ ಮಾಹಿತಿ ರವಾನಿಸಲು ಪೊಲೀಸ್ ಇಲಾಖೆ ನಿರತವಾಗಿದೆ.










