ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ನಡೆದಿದೆ.
ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಹಾಸನ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು, ಮುಂದೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಮೂವರು ಪುರುಷರು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಬೆಂಗಳೂರಿನ ಬೆಂಡಿಗನಹಳ್ಳಿಯ ನಮಿತಾ, ರಾಜಸ್ಥಾನ ಮೂಲದ ಪಂಕಜ್ ಶರ್ಮಾ, ಬೆಂಗಳೂರಿನ ವಂಶಿ ಕೃಷ್ಣ, ಧಾರವಾಡದ ರಘುನಾಥ್ ಎಂದು ಗುರುತಿಸಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಬೆಳ್ಳೂರು ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










