ಹುಬ್ಬಳ್ಳಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಅವರ ರಾಷ್ಟ್ರೀಯ ನಾಯಕರು ಯಾವುದೇ ಸ್ವಾತಂತ್ರ್ಯ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ನಾಯಕರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ನೀಡಿಲ್ಲ. ಆ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭತ್ವ ಎಂಬುವುದೇ ಇಲ್ಲ. ಅಲ್ಲದೇ ಬಿ.ಎಸ್. ಯಡಿಯೂರಪ್ಪ ಅವರಿಗೆ ರಾಷ್ಟ್ರೀಯ ನಾಯಕರೂ ಯಾವುದೇ ಸ್ವಾತಂತ್ರ್ಯವನ್ನು ನೀಡುತ್ತಿಲ್ಲ. ಹೀಗಾಗಿ ಯಡಿಯೂರಪ್ಪ ಅವರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಆರ್ಥಿಕ ನೆರವನ್ನೂ ಬಿಡುಗಡೆ ಮಾಡುತ್ತಿಲ್ಲ. ರಾಜ್ಯಕ್ಕೆ ಬರಬೇಕಾದ ಪಾಲು ಬಂದಿಲ್ಲ ಎಂದು ಅಸಮಾಧಾನ ಹೊರಹಾಕಿದರು.
ಇದೇ ವೇಳೆ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಸಂವಿಧಾನಕ್ಕೆ ವಿರುದ್ಧವಾದ ಕಾಯ್ದೆ. ಜಾತಿ, ಧರ್ಮದ ಆಧಾರದ ಮೇಲೆ ಈ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಈ ಕಾಯ್ದೆಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದರು.










