ಬೆಂಗಳೂರು: ಅತಿ ವೇಗವಾಗಿ ಬಂದ ಕಾರೊಂದು ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಿನ್ನೆ ಬೆಳಗ್ಗೆ ರಾಜಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಕೃಷ್ಣಪ್ಪ(55) ಎಂದು ಗುರುತಿಸಲಾಗಿದೆ. ಪ್ರಕಾಶ್ ನಗರದ ನಿವಾಸಿಯಾಗಿರುವ ಕೃಷ್ಣಪ್ಪ ರಾಜ್ಕುಮಾರ್ ರಸ್ತೆ ಕಡೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ನವರಂಗ್ ಸಿಗ್ನಲ್ ಬಳಿ ಕಾರು ಚಾಲಕ ಯೂಟರ್ನ್ ತೆಗೆಯುವಾಗ ಕೃಷ್ಣಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಕೃಷ್ಣಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನೆ ಸಂಬಂಧ ಕೆಆರ್ ಮಾರ್ಕೆಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










