ಬೆಂಗಳೂರಿನಿಂದ ಹೊರಟಿರುವ ಎಸ್.ಎಂ.ಕೃಷ್ಣ ಪಾರ್ಥಿವ ಶರೀರ: ಮಧ್ಯಾಹ್ನ ಹುಟ್ಟೂರಲ್ಲಿ ಅಂತ್ಯಕ್ರಿಯೆ.

22

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಮೃತದೇಹದ ಅಂತಿಮ ವಿಧಿ ವಿಧಾನ ಇಂದು ಅವರ ಹುಟ್ಟೂರು ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ನಡೆಯಲಿದೆ. ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಸದಾಶಿವನಗರದಿಂದ ಹೊರಟಿರುವ ಕೃಷ್ಣ ಅವರ ಪಾರ್ಥಿವ ಶರೀರ ಕೆಂಗೇರಿ ಮಾರ್ಗವಾಗಿ ಮದ್ದೂರು ತಲುಪಲಿದೆ. ಮಾರ್ಗಮಧ್ಯೆ ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಕಾಲ ಮೃತದೇಹದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಎಸ್.ಎಂ.ಕೃಷ್ಣ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ಮಂಡ್ಯ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ಕೆಲವರು ಒತ್ತಾಯಿಸಿದ್ದರು. ಆದರೆ ಆ ರೀತಿ ಮಾಡಲು ಸಾಧ್ಯವಾಗುವುದಿಲ್ಲ, ದಯವಿಟ್ಟು ಸಹಕರಿಸಬೇಕು. ಮಧ್ಯಾಹ್ನ ಮೂರು ಗಂಟೆಗೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.