ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ.

36

ಬೆಂಗಳೂರು: ನಗರದ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯ ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಸಂದೇಶ ಪ್ರಕಟಿಸಿದೆ.
ಕಟ್ಟಡ ಕುಸಿತದಲ್ಲಿ ಮೃತಪಟ್ಟ ಮೃತಪಟ್ಟ ಕಾರ್ಮಿಕರ 8 ಜನರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ಘೋಷಣೆ ಮಾಡಲಾಗಿದೆ ಹಾಗೂ ಕಟ್ಟಡ ಕುಸಿತದಲ್ಲಿ ಗಾಯಗೊಂಡ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಈ ಪರಿಹಾರದ ಮೊತ್ತವನ್ನು ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಕೋಡಲಾಗುತ್ತದೆ. ಈ ಕಟ್ಟಡ ಕುಸಿತದ ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ಮೃತ ಕಾರ್ಮಿಕರ ಕುಟುಂಬಸ್ಥರ ನೋವಿನಲ್ಲಿ ನಾನು ಭಾಗಿ ಎಂದಿದ್ದಾರೆ. ಹಾಗೂ ಕಟ್ಟಡ ಕುಸಿತದಲ್ಲಿ ಗಾಯಗೊಂಡ ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಬೆಂಗಳೂರು ನಗರದ ಹೆಣ್ಣೂರು ಸಮೀಪದ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇಗ 8ಕ್ಕೆ ಏರಿಕೆಯಾಗಿದೆ. ಮಂಗಳವಾರ ಸಂಜೆಯಿಂದಲೂ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಇದುವರೆಗೆ 8 ಕಾರ್ಮಿಕರ ಮೃತದೇಹಗಳನ್ನ ಹೊರಗೆ ತೆಗೆಯಲಾಗಿದೆ. ಸ್ಥಳದಲ್ಲೇ ಇರುವ ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ ಸಿಬ್ಬಂದಿ ನಿರಂತರವಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದುವರೆವಿಗೆ 14 ಜನರನ್ನು ರಕ್ಷಿಸಿದ್ದಾರೆ.
ಈ ಘಟನೆ ನಡೆದ ನಂತರ ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಹೊರಮಾವು ಉಪವಿಭಾಗದ ಜೆಇಇ ವಿನಯ್ ನನ್ನು ತನ್ನ ಅಧಿಕಾರದಿಂದ ಅಮಾನತು ಮಾಡಲಾಗಿದೆ. ಹೆಣ್ಣೂರು ಠಾಣೆ ಪೊಲೀಸರು ಕಟ್ಟಡದ ಮಾಲೀಕನಾದ ಭುವನ್, ಮುನಿರೆಡ್ಡಿ, ಗುತ್ತಿಗೆದಾರ ಮುನಿಯಪ್ಪನನ್ನು ಬಂಧಿಸಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಿಬಿಎಂಪಿ ವಲಯ ಆಯುಕ್ತ ಜೆಇ ರಮೇಶ್‍ರನ್ನ ತರಾಟೆಗೆ ತೆಗೆದುಕೊಂಡು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.