ಬೆಂಗಳೂರು : ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆನ್ನು ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮೇಕೆದಾಟು ಪಾದಯಾತ್ರೆಯಿಂದ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಇಂದು 7 ಕಿ.ಮೀ ಪಾದಯಾತ್ರೆಯಿಂದ ಬಳಲಿರುವ ಸಿದ್ದರಾಮಯ್ಯಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಹೀಗಾಗಿ ರಾಮನಗರದ ಕಾಂಗ್ರೆಸ್ ನಾಯಕರೊಬ್ಬರ ಮನೆಗೆ ವಿಶ್ರಾಂತಿಗೆ ತೆರಳಿದ್ದರು. ಬಳಿಕ ತೀವ್ರ ಬೆನ್ನು ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ.
ಇತ್ತ ಪಾದಯಾತ್ರೆ ವಿಚಾರವಾಗಿ ಕಾಂಗ್ರೆಸ್ ಹಾಗೂ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ಕೋರ್ಟ್ ತೀರ್ಪನ್ನ ನಾವು ಪಾಲಿಸುತ್ತೇವೆ ಎಂದಿದ್ದಾರೆ.










