ಬೆಳಗಾವಿ : ಕೊಳವೆ ಬಾವಿಗೆ ಬಿದ್ದು ರೈತ ಮೃತಪಟ್ಟಿರುವ ಘಟನೆ ಜಿಲ್ಲೆಯ ರಾಯಭಾಗ ತಾಲ್ಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಲಕ್ಕಪ್ಪ ಸಂಗಪ್ಪ ದೊಡ್ಡಮನಿ(39) ಮೃತ ರೈತ ಎಂದು ಗುರುತಿಸಲಾಗಿದ್ದು, ಲಕ್ಕಪ್ಪ ಅವರು ಸುಮಾರು 18ರಿಂದ 20 ಅಡಿ ಆಳದ ಕೊಳೆ ಬಾವಿಯಲ್ಲಿ ಬಿದ್ದಿದ್ದು, ಈ ವಿಷಯ ತಿಳಿಯುತ್ತಿದ್ದಂತೆ ರಾಯಭಗ ತಹಶೀಲ್ದಾರ್, ಪೊಲೀಸ್ ಸಿಬ್ಬಂಧಿಗಳು ಹಾಗೂ ಅಗ್ನಿಶಾಮಕ ದಳ ಸಿಬ್ಬಂಧಿಗಳು ಆಗಮಿಸಿ ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, 3 ಗಂಟೆಗಳ ಕಾಲ ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ ಎನ್ನಲಾಗಿದೆ. ಕಳೆದ ವಾರವಷ್ಟೇ ರೈತ ಲಕ್ಕಪ್ಪ ಅವರು ತಮ್ಮ ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಿದ್ದು, ಆದರೆ ಅದರಲ್ಲಿ ಕಡಿಮೆ ನೀರು ಬಂದಿದೆ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಲಕ್ಮಣ ನಿಂಬರಗಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










