ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್- ರಾಜ್ಯದ ಹಲವೆಡೆ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ…

46
firstsuddi

ಚಿಕ್ಕಮಗಳೂರು/ಮಂಡ್ಯ/ಹಾಸನ/: ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದಡಿ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. 13 ವರ್ಷದಿಂದ ಅಧಿಕ ಅಸ್ತಿ ಹೊಂದಿರುವ ಆರೋಪದಡಿಯಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಅನಿಲ್ ರಾಥೋಡ್ ನೇತೃತ್ವದಲ್ಲಿ ಕಡೂರು ಪಟ್ಟಣದಲ್ಲಿರುವ ನೇತ್ರಾವತಿ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ಮಾಡಲಾಗುತ್ತಿದೆ.

ಇತ್ತ ಮಂಡ್ಯದಲ್ಲಿ ಲೋಕೋಪಯೋಗಿ ಇಲಾಖೆ ಇಇ ಆಗಿರುವ ಹರ್ಷ ಎಂಬವರ ಮನೆ, ಕಚೇರಿ, ಕುಟುಂಬಸ್ಥರು, ಸಂಬಂಧಿಕರ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ಇವರ ಮನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿದೆ. ಮಂಡ್ಯದ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್​ಹೌಸ್ ಮೇಲೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಹಾಸನದಲ್ಲಿ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಹೆಲ್ತ್ ಇನ್ಸ್ ಪೆಕ್ಟರ್ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ಎಸ್‍ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‍ಪಿ ತಿರುಮಲೇಶ್, ಇನ್ಸ್ ಪೆಕ್ಟರ್ ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿದೆ. ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.