ಬೆಂಗಳೂರು: ಬ್ಯಾಡಗಿ ಮೆಣಸಿನಕಾಯಿ ಬೆಲೆ ಹಠಾತ್ ಕುಸಿತಗೊಂಡಿದ್ದು, ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ ಕುಸಿತಕ್ಕೆ ಕಾರಣವೇನೆಂದು ತಿಳಿದು, ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದೇನೆ. ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ರೈತರು ಅಗ್ನಿಶಾಮಕ ವಾಹನ ಸೇರಿದಂತೆ ಕನಿಷ್ಠ ಮೂರು ವಾಹನಗಳಿಗೆ ರೈತರು ಬೆಂಕಿ ಹಚ್ಚಿದ್ದಾರೆ. ಎಪಿಎಂಸಿ ಕಚೇರಿಯಲ್ಲಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ವಾಹನವನ್ನು ಮಾರುಕಟ್ಟೆ ಒಳಗೆ ಪ್ರವೇಶಿಸದಂತೆ ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ ನಡೆದಿದೆ. ಕೆಲ ಹೊತ್ತಿನ ಬಳಿಕ ಪೊಲೀಸರು ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆಂದು ಮಾಹಿತಿ ನೀಡಿದರು.










