ಮಂಗಳೂರು : ನಗರದ ಸುರತ್ಕಲ್ ನಲ್ಲಿ ಭಾನುವಾರ ಪುಂಡರ ಗುಂಪು ಇನ್ಸ್ ಪೆಕ್ಟರ್ ಎದುರಿನಲ್ಲಿಯೇ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.
ನಗರದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಮಲ್ಪೆ ಬೀಚ್ ಗೆ ತಿರುಗಾಡಲು ಬಂದು ವಾಪಾಸಾಗುವ ವೇಳೆ ಸುರತ್ಕಲ್ ಟೋಲ್ ಗೇಟ್ ಬಳಿ ಸಂಘಟನೆಯೊಂದರ ಕಾರ್ಯಕರ್ತರು ಕಾರಿನಲ್ಲಿ ಎರಡು ಕೋಮಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಜೊತೆಯಾಗಿ ತೆರಳಿದ್ದಾರೆ ಎಂಬ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಘಟನೆಯಲ್ಲಿ ಸಂಘಟನೆಯ ಕಾರ್ಯಕರ್ತರು ಕಾರಿಗೆ ಮುತ್ತಿಗೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಹಲ್ಲೆ ನಡೆಸಲು ಮುಂದಾಗಿರುವುದು ಕೂಡ ಕಂಡು ಬಂದಿದ್ದು ಆ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಸುರತ್ಕಲ್ ಪೊಲೀಸರು ಐವರನ್ನು ಬಂಧಿಸಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ತಿಳಿಸಿದ್ದಾರೆ.










