ಮಕ್ಕಳನ್ನು ವಿದ್ಯಾವಂತರನ್ನಾಗಿಸುವುದರ ಜೊತೆಗೆ ಉತ್ತಮ ನಾಗರಿಕರನ್ನಾಗಿಯೂ ರೂಪಿಸಬೇಕು.

36

ಚಿಕ್ಕಮಗಳೂರು ಜ.26: ಪೋಷಕರು ಮತ್ತು ಶಿಕ್ಷಕರು ಮಕ್ಕಳನ್ನು ವಿದ್ಯಾವಂತರನ್ನಾಗಿಸುವುದರ ಜೊತೆಗೆ ಅವರನ್ನು ಉತ್ತಮ ನಾಗರಿಕರನ್ನಾಗಿಯೂ ರೂಪಿಸಬೇಕು ಎಂದು ಸ್ವಚ್ಛ ಚಾರಿಟಬಲ್ ಟ್ರಸ್ಟ್‍ನ ಅಧ್ಯಕ್ಷೆ ಡಾ. ಶುಭಾ ವಿಜಯ್ ಸಲಹೆ ಮಾಡಿದರು. ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಶನಿವಾರ ನಡೆದ ಎಂಇಎಸ್ ಕಿಡ್ಡೀಸ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯನಿಗೆ ವಿದ್ಯೆ ನಿಜವಾದ ಆಸ್ತಿ, ಅದನ್ನು ಯಾರೂ ಕದಿಯಲಾಗದು ಹಾಗಾಗಿ ಪೋಷಕರು ಮತ್ತು ಶಿಕ್ಷಕರು ಶ್ರಮವಹಿಸಿ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು. ಅದರ ಜೊತೆಗೆ ಮಕ್ಕಳನ್ನು ನಿರಂತರವಾಗಿ ತಿದ್ದಿ, ತೀಡಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ಕಿವಿಮಾತು ಹೇಳಿದರು. ಶಿಕ್ಷಕರು ಪಠ್ಯದ ಜೊತೆಗೆ ಮಕ್ಕಳ ಆರೋಗ್ಯ ಮತ್ತು ಸರ್ವಾಂಗೀಣ ಬೆಳವಣಿಗೆ ಬಗ್ಗೆಯೂ ಕಾಳಜಿ ವಹಿಸಬೇಕು. ಅವರಲ್ಲಿ ಸಾಮಾನ್ಯ ಜ್ಞಾನವನ್ನು ಬೆಳೆಸಬೇಕು ಎಂದು ತಿಳಿಸಿದರು. ಮಲೆನಾಡು ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಡಿ.ಎಲ್. ವಿಜಯ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಯಾವುದೇ ಕೊರತೆಯಾಗದಂತೆ ಸಂಸ್ಥೆಯಲ್ಲಿ ಎಲ್ಲಾ ರೀತಿಯ ಸೌಕರ್ಯ ಮತ್ತು ಸವಲತ್ತುಗಳನ್ನು ಒದಗಿಸಲಾಗಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಎನ್.ಕೇಶವಮೂರ್ತಿ ವಿದ್ಯಾರ್ಥಿಗಳು ಸಂಸ್ಥೆಯಲ್ಲಿರುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶ್ರದ್ಧೆಯಿಂದ ವಿದ್ಯಾರ್ಜನೆ ಮಾಡಬೇಕು ಆ ಮೂಲಕ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು. ಪ್ರಾಂಶುಪಾಲೆ ಸಬಿತಾ ಪಿಂಟೋ ಶಾಲೆಯ ವಾರ್ಷಿಕ ವರದಿಯನ್ನು ಮಂಡಿಸಿದರು. ವಾರ್ಷಿಕೋತ್ಸವದ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು. ಮಲೆನಾಡು ವಿದ್ಯಾಸಂಸ್ಥೆಯ ಶೈಕ್ಷಣಿಕ ಸಲಹೆಗಾರ ಕೆ.ಎನ್. ಮಂಜುನಾಥ ಭಟ್, ಕಚೇರಿ ವ್ಯವಸ್ಥಾಪಕಿ ಶ್ರೀಲಕ್ಷ್ಮಿ, ವಿದ್ಯಾರ್ಥಿ ಸಿ.ಡಿ. ಚಂದನ. ಶಿಕ್ಷಕರಾದ ರಂಜನಿ ಕಶ್ಯಪ್, ಡಿ.ಎಸ್. ಮೇಘ, ಭಾವನಾ ಉಪಸ್ಥಿತರಿದ್ದರು.