ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ.

30

ಚಾಮರಾಜನಗರ: ಅಭಿವೃದ್ಧಿ ಕಾಣದ ಶಾಪಗ್ರಸ್ಥ ಜಿಲ್ಲೆ ಎಂಬ ಹಣೆ ಪಟ್ಟಿ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ಬಾರಿ ಫೆ.15 ರಂದು ಸಚಿವ ಸಂಪುಟ ಸಭೆ ನಡೆಸಲಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು ಹಾಗೂ ಹಾಸನ ಜಿಲ್ಲೆಯ ಜ್ವಲಂತ ಸಮಸ್ಯೆಯ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ಈ ವಿಚಾರವಾಗಿ ಪಶುಸಂಗೋಪನಾ ಸಚಿವ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ ವೆಂಕಟೇಶ್ ವದರಿ ನೀಡಿದ್ದಾರೆ. ಸಚಿವ ಸಂಪುಟ ಸಭೆ ಸಂಬಂಧ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲೆಗೆ ಅಗತ್ಯವಿರುವ ಮೂಲ ಸೌಕರ್ಯ ನಿವಾರಣೆ ಕುರಿತು ಪ್ರಸ್ತಾವನೆ ಸಲ್ಲಿಸಲು ತಿಳಿಸಿದೆ. ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಸಂಪೂರ್ಣ ಒಳಚರಂಡಿ ವ್ಯವಸ್ಥೆ, ಪರಿಸರ ಪ್ರವಾಸೋದ್ಯಮ ಉತ್ತೇಜಿಸಲು ಯೋಜನೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತದೆ. ಗ್ರಾಮಾಂತರ ಮತ್ತು ನಗರ, ಪಟ್ಟಣ ಪ್ರದೇಶಗಳಿಗೆ ಪರಿಪೂರ್ಣ ಮೂಲ ಸೌಕರ್ಯ, ಹಾಡಿ ಜನರಿಗೆ ಮೂಲ ಸೌಕರ್ಯದ ಬಗ್ಗೆ ಪರಿಹಾರ ಸಿಗುವ ನಿರೀಕ್ಷೆಯಿದೆ ಎಂದು ಸಚಿವರು ತಿಳಿಸಿದ್ದಾರೆ.