ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ- ಬಿಜೆಪಿಯಲ್ಲಿ ಹೆಚ್ಚಿದ ಟಿಕೆಟ್ ಗೊಂದಲ…

48
firstsuddi

ಉಡುಪಿ: ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆಯವರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ ಬಿಜೆಪಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯನ್ನು ಇನ್ನಷ್ಟು ಕಗ್ಗಂಟಾಗಿಸಿದ್ದಾರೆ ಎನ್ನಲಾಗುತ್ತಿದೆ.

ಪ್ರಸ್ತುತ ಲೋಕಸಭಾ ಸದಸ್ಯರಾದ ಶೋಭಾ ಕರಂದ್ಲಾಜೆಯವರಿಗೆ ಟಿಕೆಟ್ ನೀಡಲು ಕ್ಷೇತ್ರದ ಕಾರ್ಯಕರ್ತರ ವಿರೋಧವಿದ್ದು, ಪ್ರಸ್ತುತ ಚಾಲ್ತಿಯಲ್ಲಿರುವ ಖ್ಯಾತನಾಮ ಅಭ್ಯರ್ಥಿಗಳನ್ನು ಬಿಟ್ಟು ಸಾಮಾನ್ಯ ಕಾರ್ಯಕರ್ತರ ನಡುವಿನ ಅಭ್ಯರ್ಥಿಯ ಬಗ್ಗೆ ಚರ್ಚೆಗಳು ಆರಂಭವಾಗಿದೆ.

ಬಂಟ ಸಮುದಾಯದ ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದ್ದು ಅದೇ ಕಾರಣಕ್ಕೆ ಅವರು ಕಾಂಗ್ರೆಸ್ ಸೇರಿದ್ದಾರೆ. ಅವರು ಅಭ್ಯರ್ಥಿಯಾದರೆ ಉಡುಪಿ ಜಿಲ್ಲೆಯಲ್ಲಿ ಪ್ರಾಬಲ್ಯ ಹೊಂದಿರುವ, ಬಿಜೆಪಿಯ ಸಾಂಪ್ರದಾಯಿಕ ಮತವಾಗಿರುವ ಬಂಟ ಸಮುದಾಯದ ಮತದಾರರು ಹೆಗ್ಡೆಯವರನ್ನು ಬೆಂಬಲಿಸುವ ಸಾಧ್ಯತೆಗಳಿದ್ದು, ಇದು ಬಿಜೆಪಿಯ ತಲೆನೋವಿಗೆ ಕಾರಣವಾಗಿದೆ.

ಈ ಹಿನ್ನಲೆಯಲ್ಲಿ ಬಿಜೆಪಿ ಕೂಡ ಬಂಟ ಸಮುದಾಯದ ಅಭ್ಯರ್ಥಿಯನ್ನೇ ಕಣಕ್ಕಿಳಿಸುವ ಅಥವಾ ಕ್ಷೇತ್ರದಲ್ಲಿ ಅತೀ ಹೆಚ್ಚು ಸಂಖ್ಯೆಯಲ್ಲಿರುವ ಬಿಲ್ಲವ (ಈಡಿಗ) ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದೆ.