ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಮೊಣಕಾಲಿನ ನೋವಿನಿಂದ ಬಳಲುತ್ತಿದ್ದರು. ಇದೀಗ ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿಯ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಶ್ರೀ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಕೆಲ ವರ್ಷಗಳಿಂದ ಬೊಮ್ಮಾಯಿಯವರು ತೀವ್ರ ಮಂಡಿನೋವಿನಿಂದ ಬಳಲುತ್ತಿದ್ದರು. ನಡೆದಾಡುವಾಗ ಸಮಸ್ಯೆ ಎದುರಿಸುತ್ತಿದ್ದರು. ಆದರೂ ಸಹ ಅವರು ಕುಂಟುತ್ತಾ ರಾಜಕೀಯ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಕೊನೆಗೆ ನೋವು ಹೆಚ್ಚಾಗಿದ್ದರಿಂದ ಅವರು ಸಿಎಂ ಸ್ಥಾನದಲ್ಲಿರುವಾಗಲೇ ವಿದೇಶಕ್ಕೆ ಹೋಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಒಂದು ವೇಳೆ ಆಪರೇಷನ್ ಮಾಡಿಸಿಕೊಂಡರೇ ಹಲವು ದಿನಗಳ ವಿಶ್ರಾಂತಿ ಅಗತ್ಯವಿರುತ್ತೆ ಎಂದು ಆಪರೇಷನ್ ಮಾಡಿಸಿಕೊಳ್ಳುವುದನ್ನು ಕೈಬಿಟ್ಟಿದ್ದರು. ಬದಲಿಗೆ ಬಸವರಾಜ ಬೊಮ್ಮಾಯಿ ಅವರು ಮಂಡಿ ನೋವಿಗೆ ಆಯುರ್ವೇದ ಚಿಕಿತ್ಸೆ ಸಹ ಪಡೆದುಕೊಂಡಿದ್ದರು. ಮೈಸೂರಿನ ಮೂಲದ ಖ್ಯಾತ ನಾಟಿ ವೈದ್ಯ ಲೋಕೇಶ್ ಟೇಕ್ ಅವರಿಂದ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ, ಇದೀಗ ಮಂಡಿ ಶಸ್ತ್ರಚಿಕಿತ್ಸೆ ಆಗಲೇಬೇಕೆಂದು ವೈದ್ಯರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ.










