ಮುಂದೂಡಿಕೆಯಾಗಿದ್ದ ‘ಗಾಂಧಿ ಭಾರತ’ ಕಾರ್ಯಕ್ರಮ ಜನವರಿ 21ರಂದು ನಡೆಯಲಿದೆ: ಡಿ.ಕೆ ಶಿವಕುಮಾರ್.

31

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮ ಜ.21ರಂದು ನಡೆಯಲಿದೆ. ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ ಸಂಜೆ ಕರೆದಿದ್ದ ತುರ್ತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ ಪ್ರಾರಂಭಿಸಿದೆ. ಗಾಂಧೀಜಿ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿ.26ಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಅಂದು ಸಂಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಮರುದಿನದ ಕಾರ್ಯಕ್ರಮಗಳನ್ನು ಮುಂದೂಡಲಾಗಿತ್ತು ಎಂದು ಹೇಳಿದರು. ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಮ್ಮ ಮುಂದಿನ ಹೋರಾಟದ ಕುರಿತು ತೀರ್ಮಾನಿಸಲಾಗಿತ್ತು. ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಚರ್ಚಿಸಿ ಇದೇ ತಿಂಗಳು 21ರಂದು ಈ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದಾರೆ. 1924ರ ಕಾಂಗ್ರೆಸ್ ಅಧಿವೇಶನದ ಬಗ್ಗೆ ವರದಿಗಳ ಪುಸ್ತಕ ಹಾಗೂ ಇತರೆ ಪುಸ್ತಕಗಳನ್ನು ಜನವರಿ 21ರಂದು ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಜ.21ರಂದು ಬೆಳಗ್ಗೆ ಸುವರ್ಣಸೌಧದ ಬಳಿ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಶಾಸಕರಿಗೂ ಆಹ್ವಾನ ನೀಡಲಾಗುವುದು. ಅಂದು ಮಧ್ಯಾಹ್ನ 12 ಗಂಟೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎಂಬ ಎಐಸಿಸಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ಎಲ್ಲಾ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ ನೂರು ಜನರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಬೇಕು ಎಂದು ಕರೆ ನೀಡುತ್ತಿದ್ದೇವೆ. ಈ ಸಮಾವೇಶದಲ್ಲಿ ಬಾಗವಹಿಸುವ ನಾಯಕರ ಕುರಿತು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ ಎಂದು ತಿಳಿಸಿದರು.