ಮುರುಘಾ ಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ.

88
firstsuddi

ಚಿತ್ರದುರ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ವರ್ಷದ ಅಮೃತಮಹೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇಂದು ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದರು. ರಾಹುಲ್ ಗಾಂಧಿಯವರಿಗೆ ಡಿಕೆ ಶಿವಕುಮಾರ್, ಬಿಕೆ ಹರಿಪ್ರಸಾದ್ ಸೇರಿದಂತೆ ಹಲವರು ಸಾಥ್ ನೀಡಿದರು.

ರಾಹುಲ್ ಗಾಂಧಿ ಭೇಟಿ ಹಿನ್ನೆಲೆ ಮುರುಘಾ ಮಠದ ಎರಡು ದ್ವಾರಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಮಠಕ್ಕೆ ಆಗಮಿಸುತ್ತಿದ್ದಂತೆ ನೇರವಾಗಿ ಕರ್ತೃ ಗದ್ದುಗೆ ದರ್ಶನ ಪಡೆದ ರಾಹುಲ್ ಬಳಿಕ ಮುರುಘಾ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕಬೀರಾನಂದಾಶ್ರಮದ ಶಿವಲಿಂಗಾನಂದ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಠಾಧೀಶರ ಜೊತೆ ಕೆಲ ಕಾಲ ಮಾತುಕತೆ ನಡೆಸಿದ ರಾಹುಲ್ ಗಾಂಧಿ ನಂತರ ದಾವಣಗೆರೆಗೆ ಪ್ರಯಾಣ ಬೆಳೆಸಿದ್ದಾರೆ.