ನವದೆಹಲಿ : ಕರ್ನಾಟಕದಲ್ಲಿ ಮುಸ್ಲಿಮರ 2ಬಿ ಮೀಸಲಾತಿ ರದ್ದುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
2ಬಿ ಅಡಿ ಮುಸ್ಲಿಮರಿಗಿದ್ದ ಶೇ.4 ರಷ್ಟು ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿತ್ತು. ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ನ್ಯಾ. ಕೆ.ಎಂ. ಜೋಸೆಫ್ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿದ್ದು, ಮೇ 9ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಅಲ್ಲಿಯವರೆಗೂ ಮೀಸಲಾತಿ ಜಾರಿಗೆ ನ್ಯಾಯಾಲಯ ತಡೆ ನೀಡಿದೆ.
ಮುಸ್ಲಿಂ ಮೀಸಲಾತಿ ರದ್ದತಿ ಪ್ರಕರಣದ ವಿಚಾರಣೆ ಆರಂಭಕ್ಕೂ ಮುನ್ನ ಅರ್ಜಿ ಬಗ್ಗೆ ಪ್ರಸ್ತಾಪಿಸಿದ ರಾಜ್ಯ ಸರ್ಕಾರದ ಪರ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಜ್ಯ ಸರ್ಕಾರಕ್ಕೆ ಹೆಚ್ಚುವರಿ ಮಾಹಿತಿಯುಳ್ಳ ಅಫಿಡವಿಟ್ ಸಲ್ಲಿಸಲು ಸಾಧ್ಯವಾಗಿಲ್ಲ. ಹೀಗಾಗಿ ಇನ್ನೊಂದು ವಾರ ಸಮಯ ಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿವಾದಿಯಾಗಿದ್ದ ಕಪಿಲ್ ಸಿಬಲ್ ಕೂಡಾ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳು ವಿಚಾರಣೆಯನ್ನು ವಾರಗಳ ಕಾಲ ಮುಂದೂಡಿದರು.
ಒಬಿಸಿ ಮೀಸಲಾತಿ ಪಟ್ಟಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ. 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿತ್ತು. ಅದರನ್ವಯ ಈ ಮೀಸಲಾತಿಯನ್ನು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಕ್ಕೆ ತಲಾ ಶೇ. 2ರಷ್ಟು ಹಂಚಿಕೆ ಮಾಡಿ, 2ಬಿಯಲ್ಲಿದ್ದ ಮುಸ್ಲಿಂ ಸಮುದಾಯವನ್ನು ಶೇ.10ರಷ್ಟು ಮೀಸಲಾತಿ ಇರುವ EWS ಕೋಟಾಕ್ಕೆ ಸ್ಥಳಾಂತರಿಸುತ್ತಿರುವುದಾಗಿ ಸರ್ಕಾರ ಹೇಳಿತ್ತು.










