ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಸರ್ಕಾರ ಕಳುಹಿಸಿದ ಸುಗ್ರೀವಾಜ್ಞೆಗೆ ಸಹಿ ಹಾಕದೇ ವಾಪಸ್ ಕಳುಹಿಸಿದ್ದಾರೆ. ಹಲವು ಸ್ಪಷ್ಟನೆ ಕೇಳಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು 5 ಲಕ್ಷ ದಂಡ ಹೇಗೆ ಹಾಕುತ್ತೀರಾ ಎಂದು ರಾಜ್ಯಪಾಲರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ. ಸಾಲ ಪಡೆಯುವವನ ಬಳಿ ಏನೂ ದಾಖಲೆ ತಗೆದುಕೊಳ್ಳಬಾರದು ಎಂದು ಹೇಳಿದ್ದೀರಾ, ಆದರೆ ಇದು ಸರ್ಕಾರಿ ಸಂಸ್ಥೆಗಳ ಸಾಲದ ವೇಳೆ ಅನುಸರಿಸಬೇಕಾದ ಪರಿಸ್ಥಿತಿ ಎದುರಾಗಬಹುದು. ಶಿಕ್ಷೆ ಪ್ರಮಾಣ 10 ವರ್ಷ ವಿಧಿಸಲಾಗಿದೆ. ಶಿಕ್ಷೆ ಪ್ರಮಾಣದಲ್ಲಿ ಯಾವುದೇ ಲಾಜಿಕ್ ಇಲ್ಲ. ಪ್ರಾಮಾಣಿಕವಾಗಿ ಸಾಲ ಕೊಟ್ಟವರಿಗೂ, ಪ್ರಾಮಾಣಿಕವಾಗಿ ಸಾಲ ಮರುಪಾವತಿ ಮಾಡುವವರಿಗೂ ಸಮಸ್ಯೆ ಆಗಲಿದೆ. ಈಗ ಇರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮಕೈಗೊಳ್ಳುತ್ತಿಲ್ಲ. ಪೊಲೀಸರು ಸರಿಯಾದ ಕ್ರಮಕೈಗೊಳ್ಳದೇ ಇರುವುದರಿಂದ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ ಎಂದು ಸುಗ್ರೀವಾಜ್ಞೆ ವಾಪಸ್ ಕಳಿಸಿದ್ದಾರೆ.










