ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಮೂಲಭೂತ ಹಕ್ಕಿನ ವಿರುದ್ಧವಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ.

27

ಬೆಂಗಳೂರು: ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದ್ದು, ಇದು ವ್ಯಕ್ತಿ ಮೂಲಭೂತ ಹಕ್ಕನ್ನು ನಿಬರ್ಂಧಿಸುವುದಿಲ್ಲ, ಸಾಲದಾತರ ಹಿತಾಸಕ್ತಿಯನ್ನು ನಿರ್ಲಕ್ಷಿಸಿಲ್ಲ ಹಾಗೂ ಸಾಲ ವಸೂಲಾತಿಯನ್ನು ನಿಬರ್ಂಧಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಮೈಕ್ರೋ ಫೈನಾನ್ಸ ಕಂಪನಿಗಳು ಹಾಗೂ ಖಾಸಗಿ ವ್ಯಕ್ತಿಗಳಿಂದ ಬಲವಂತದ ಸಾಲ ವಸೂಲಿ ಹಾಗೂ ಕಿರುಕುಳ ತಪ್ಪಿಸುವ ಕರ್ನಾಟಕ ಕಿರಿ ಸಾಲ ಮತ್ತು ಸಣ್ಣ ಸಾಲ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂಜ್ ಗೆಹ್ಲೋಟ್ ಅವರು ವಾಪಸ್ ಕಳುಹಿಸಿದ್ದು, ಸುಗ್ರೀವಾಜ್ಞೆಯು ಸಹಜ ಹಾಗೂ ಸಾಲ ನೀಡುವವರ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ಆಕ್ಷೇಪಗಳಿಗೆ ಸ್ಪಷ್ಟನೆ ನೀಡಿರುವ ಕಾನೂನುಪ ಸಚಿವ ಹೆಚ್.ಕೆ ಪಾಟೀಲ್ ಅವರು, ನೋಂದಾಯಿತವಲ್ಲದ ಮತ್ತು ಸಾಲ ನೀಡಲು ಲೈಸನ್ಸ್ ಹೊಂದಿರದ ಯಾವುದೇ ವ್ಯಕ್ತಿಯು ಯಾರಿಗೇ ಸಾಲ ಕೊಡಲು ಮತ್ತು ಹೆಚ್ಚಿನ ಬಡ್ಡಿ ಮತ್ತು ಚಕ್ರಬಡ್ಡಿ ಅಥವಾ ದಂಡದ ಬಡ್ಡಿ ವಿಧಿಸಲು ಕಾನೂನಾತ್ಮಕವಾಗಿ ಅಧಿಕಾರ ಹೊಂದಿರುವುದಿಲ್ಲ. ಸಾಲವನ್ನು ಖಾಸಗಿಯಾಗಿ, ಲೈಸೆನ್ಸ್ ಇಲ್ಲದೇ ನೀಡಿ ಹೆಚ್ಚಿನ ಬಡ್ಡಿ ವಸೂಲಿ ಮಾಡಿದರೆ ಅದು ಕಾನೂನು ವಿರೋಧಿ ಕ್ರಮವಾಗಿದೆ. ಅಂತಹ ಸಾಲವು ವಸೂಲಿಗೆ ಅರ್ಹವೂ ಅಲ್ಲ, ಯೋಗ್ಯವೂ ಅಲ್ಲ ಎಂದು ಹೇಳಿದ್ದಾರೆ. ಕಾನೂನಾತ್ಮಕವಾಗಿ ನೋಂದಾಯಿತ ಸಂಸ್ಥೆ ಅಥವಾ ವ್ಯಕ್ತಿಗಳು ನಿಯಮಾನುಸಾರ ನೈಜ ಸಾಲ ನೀಡಿದವರು ವಸೂಲಿ ಮಾಡಬಾರದೆಂದು ಅಥವಾ ಅಂತಹ ಸಾಲಗಳು ವಸೂಲಿಗೆ ಅರ್ಹವಲ್ಲವೆಂದು ರಾಜ್ಯಪಾಲರಿಗೆ ಸಲ್ಲಿಸಿರುವ ಸುಗ್ರೀವಾಜ್ಞೆಯಲ್ಲಿ ಸರ್ಕಾರ ಎಲ್ಲಿಯೂ ಹೇಳಿಲ್ಲ. ಕೇವಲ ಸಾಲ ವಸೂಲಾತಿಗೆ ಕಾನೂನು ಬಾಹಿರ ಕ್ರಮಗಳನ್ನು ಕೈಗೊಳ್ಳುವುದು, ಹಿಂಸೆ ಮಾಡುವುದು ಮತ್ತು ಒತ್ತಡ ತಂತ್ರ ಹೇರುವುದು ಹಾಗೂ ಕಿರುಕುಳಕ್ಕೆ ಕಾರಣವಾಗುವುದನ್ನು ತಡೆಯಲು ಸುಗ್ರೀವಾಜ್ಞೆ ಪ್ರಸ್ತಾಪಿಸುತ್ತದೆ ಎಂದು ತಿಳಿಸಿದ್ದಾರೆ.