ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನ ಭಾರಿ ಮಳೆ ಸಾಧ್ಯತೆ-ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ…

183
firstsuddi

ಬೆಂಗಳೂರು : ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ಮಧ್ಯ ಭಾಗದಲ್ಲಿ ಮುಂದಿನ 24 ಗಂಟೆಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಹೆಚ್ಚಿದ್ದು, ಇದರಿಂದಾಗಿ ಇಂದಿನಿಂದ ಅ. 23ರ ವರೆಗೆ ರಾಜ್ಯದ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಕೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅ. 20-23ರ ವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಅ.19-23ರ ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಶಿವಮೊಗ್ಗ, ಹಾಸನ, ಮೈಸೂರು, ಕೊಡಗು, ಮಂಡ್ಯ, ಚಿಕ್ಕಮಗಳೂರು, ರಾಮನಗರ, ಬೆಂಗಳೂರು, ಬೀದರ್, ಚಿಕ್ಕಬಳ್ಳಾಪುರ, ಗದಗ, ಜಿಲ್ಲೆಗಳಲ್ಲಿ ಅ. 19-22ರ ವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಇಂದಿನಿಂದ 23ರ ವರೆಗೆ ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.