ನವದೆಹಲಿ : ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಸಭೆಯ ವಿರೋಧ ಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಒಬ್ಬ ವ್ಯಕ್ತಿ ಒಂದು ಹುದ್ದೆ ಎಂಬ ಕಾಂಗ್ರೆಸ್ ನಿಯಮದಂತೆ ಇದೀಗ ರಾಜ್ಯಸಭಾ ವಿಪಕ್ಷ ನಾಯಕ ಸ್ಥಾನಕ್ಕೆ ಖರ್ಗೆ ರಾಜೀನಾಮೆ ಸಲ್ಲಿಸಿದ್ದು, ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಕಳುಹಿಸಿದ್ದಾರೆ. ಖರ್ಗೆ ಅವರ ರಾಜೀನಾಮೆ ನಂತರ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಯಾರು ಆಯ್ಕೆಯಾಗುತ್ತಾರೆ ಎಂಬುದು ಸದ್ಯದ ಪ್ರಶ್ನೆಯಾಗಿದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಮಲ್ಲಿಕಾರ್ಜುನ ಖರ್ಗೆಯವರ ಗೆಲುವು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.










