ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿಯ ಆದೇಶ ಇಂದು ಪ್ರಕಟವಾಗಲಿದೆ. ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ 57ನೇ ಸಿಸಿಹೆಚ್ ನ್ಯಾಯಾಲಯ ಆದೇಶ ಹೊರಡಿಸಲಿದೆ. ಸರ್ಕಾರದ ಅಭಿಯೋಜಕ ಎಸ್‍ಪಿಪಿ ಪ್ರಸನ್ನಕುಮಾರ್ ಹಾಗೂ ದರ್ಶನ್ ಪರ ವಕೀಲ ಸಿ.ವಿ. ನಾಗೇಶ್ ಅವರ ಸುದೀರ್ಘ ವಾದ – ಪ್ರತಿವಾದ ಆಲಿಸಿದ 57ನೇ ಸಿಸಿಹೆಚ್ ನ್ಯಾಯಾಲಯದ ನ್ಯಾ. ಜೈಶಂಕರ್ ಅವರು ಅಕ್ಟೋಬರ್ 14ಕ್ಕೆ ಜಾಮೀನು ತೀರ್ಪು ಕಾಯ್ದಿರಿಸಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾಗೌಡ, ರವಿ, ನಾಗರಾಜ್, ಲಕ್ಷ್ಮಣ್ ಹಾಗೂ ದೀಪಕ್ ಜಾಮೀನು ಆದೇಶ ಇದೇ ದಿನವೇ ಬರಲಿದೆ. ಜಾಮೀನು ಸಿಗದಿದ್ದರೆ ದರ್ಶನ್ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ. ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಜೂನ್ 11ರಂದು ದರ್ಶನ್ ಹಾಗೂ ಇತರರನ್ನು ಬಂಧಿಸಲಾಗಿತ್ತು. ಸದ್ಯ ದರ್ಶನ್ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಸೆಪ್ಟೆಂಬರ್ 21ರಂದು ಜಾಮೀನು ಅರ್ಜಿ ಸಲ್ಲಿಸಲಾಗಿತ್ತು. ಪ್ರಾಸಿಕ್ಯೂಷನ್ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಪ್ರಸನ್ನಕುಮಾರ್ ವಾದ ಮಂಡಿಸಿದ್ದಾರೆ. ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ಹಾಗೂ ಪವಿತ್ರಾ ಗೌಡ ಪರವಾಗಿ ವಕೀಲ ಟಾಮಿ ಸೆಬಾಸ್ಟಿಯನ್ ವಾದಿಸಿದ್ದರು.