ಲಕ್ನೋ : ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ವರು ರೈತರ ಕುಟುಂಬಗಳಿಗೆ ತಲಾ 45 ಲಕ್ಷ ರೂ. ಪರಿಹಾರ ನೀಡುವುದಾಗಿ ಉತ್ತರಪ್ರದೇಶ ಸರ್ಕಾರ ಘೋಷಿಸಿದೆ. ಇನ್ನು ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ತಲಾ 10 ಲಕ್ಷ ರೂಪಾಯಿ ನೀಡುವುದಾಗಿಯೂ ಹೇಳಿದೆ. ಅಲ್ಲದೇ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ನ್ಯಾಯಾಂಗ ತನಿಖೆ ನಡೆಸಲಾಗುವುದು ಮತ್ತು ಮೃತರ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ಕೊಡಲಾಗುವುದು ಎಂಬ ಭರವಸೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶ ಪೊಲೀಸ್ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು, ಘಟನೆಗೆ ಸಂಬಂಧಪಟ್ಟಂತೆ ರೈತರು ನೀಡಿರುವ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲು ಮಾಡಲಾಗಿದೆ. ಘಟನೆಯ ತನಿಖೆಯನ್ನು ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರೊಬ್ಬರು ಮಾಡುತ್ತಾರೆ. ಹಾಗೇ ಯಾವುದೇ ರಾಜಕೀಯ ನಾಯಕರಿಗೂ ಲಖಿಂಪುರ ಖೇರಿಗೆ ಭೇಟಿ ನೀಡಲು ಅವಕಾಶ ನೀಡುವುದಿಲ್ಲ. ಇಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ರೈತ ಸಂಘಟನೆಗಳ ಮುಖಂಡರು ಮಾತ್ರ ಇಲ್ಲಿಗೆ ಬರಬಹುದು ಎಂದೂ ಹೇಳಿದ್ದಾರೆ. ಸದ್ಯ ರೈತ ಕುಟುಂಬಗಳಿಗೆ ಪರಿಹಾರ ಘೋಷಣೆಯಾಗಿದೆ ಎಂದು ಹೇಳಿದ್ದಾರೆ.










