‘ಕಾಂತಾರ’ ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಕೇರಳ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಕೆಲವು ಷರತ್ತುಗಳನ್ನು ಹಾಕುವ ಮೂಲಕ ಕೇರಳ ಹೈಕೋರ್ಟ್ ನ ನ್ಯಾಯಮೂರ್ತಿ ಎ. ಬದ್ರುದೀನ್ ಅವರು ರಿಷಬ್ ಹಾಗೂ ವಿಜಯ್ ಗೆ ನಿರೀಕ್ಷಣಾ ಜಾಮೀನು ನೀಡಿದ್ದಾರೆ. ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಮಧ್ಯಂತರ ಅಥವಾ ಅಂತಿಮ ಆದೇಶ ಬರೋವರೆಗೆ ಕಾಂತಾರ ಸಿನಿಮಾದಲ್ಲಿ ‘ವರಾಹ ರೂಪಂ..’ ಹಾಡನ್ನು ಬಳಕೆ ಮಾಡುವಂತಿಲ್ಲ. ಈ ಪ್ರಕರಣದ ಮರುವಿಚಾರಣೆಗೆ ಕೋರಲು ಅರ್ಜಿದಾರರಿಗೆ ಅವಕಾಶ ಇದೆ ಎಂದು ಹೇಳಿದ್ದಾರೆ.
ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ‘ವರಾಹ ರೂಪಂ..’ ಹಾಡು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ನಮ್ಮ ಟ್ಯೂನ್ ಕದಿಯಲಾಗಿದೆ ಎಂದು ಮಲಯಾಳಂನ ‘ತೈಕ್ಕುಡಂ ಬ್ರಿಡ್ಜ್’ ಆರೋಪ ಮಾಡಿತ್ತು. ಅದು ತಮ್ಮ ‘ನವರಸಂ’ ಹಾಡಿನದ್ದು ಎನ್ನುವುದನ್ನು ಸಾಕ್ಷ್ಯ ಸಮೇತ ಕೋಯಿಕ್ಕೋಡ್ ನ ಠಾಣೆಯಲ್ಲಿ ದೂರು ದಾಖಲಿಸಿತ್ತು. ಸದ್ಯ ಈ ಪ್ರಕರಣ ಕೋರ್ಟ್ ನಲ್ಲಿ ವಿಚಾರಣೆ ಆಗುತ್ತಿದೆ.










