ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು- ಎಚ್.ಡಿ. ತಮ್ಮಯ್ಯ

75
firstsuddi

ಚಿಕ್ಕಮಗಳೂರು: ಮಾನಸಿಕ ಮತ್ತು ದೈಹಿಕ ಆರೋಗ್ಯದ ದೃಷ್ಟಿಯಿಂದ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಸಲಹೆ ಮಾಡಿದರು.

ನಗರದ ಶ್ರೀ ಭುವನೇಂದ್ರ ವಿದ್ಯಾಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಸಮಾರಂಭದಲ್ಲಿ ವಿವಿಧ ವಿದ್ಯಾರ್ಥಿ ಸಂಘಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಓದು ನಮಗೆ ಜ್ಞಾನ ನೀಡುತ್ತದೆ, ಶಿಕ್ಷಣವಂತರನ್ನಾಗಿಸುತ್ತದೆ. ಪಠ್ಯೇತರ ಚಟುವಟಿಕೆ ನಮ್ಮನ್ನು ಪ್ರತಿಭಾವಂತರನ್ನಾಗಿ ಮಾಡುವುದರ ಜೊತೆಗೆ ಮಾನಸಿಕ ಮತು ದೈಹಿಕವಾಗಿ ಸದೃಢಗೊಳಿಸುತ್ತದೆ ಎಂದು ಕಿವಿ ಮಾತು ಹೇಳಿದರು.

ವಿದ್ಯಾರ್ಥಿಗಳು ಆಟ, ಪಾಠ ಎರಡರಲ್ಲೂ ಪಾಲ್ಗೊಳ್ಳಬೇಕು. ಯಾವುದೇ ಆಕರ್ಷಣೆಗಳಿಗೂ ಒಳಗಾಗದೆ ಶ್ರದ್ಧೆ ಮತ್ತು ಪರಿಶ್ರಮದಿಂದ ವಿದ್ಯಾರ್ಜನೆ ಮಾಡಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಬಿ.ಹೆಚ್. ನರೇಂದ್ರ ಪೈ, ತಮ್ಮ ಸಂಸ್ಥೆ ಗುಣಮಟ್ಟದ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಂಸ್ಕೃತಿ, ಸಂಸ್ಕಾರವನ್ನೂ ಬೆಳೆಸುತ್ತಿದೆ. ಅವರನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ನೂತನ ಶಾಸಕ ಎಚ್.ಡಿ. ತಮ್ಮಯ್ಯ ಅವರನ್ನು ಸಮಾರಂಭದಲ್ಲಿ ಸಂಸ್ಥೆ ವತಿಯಿಂದ ಸನ್ಮಾನಿಸಿ, ಅಭಿನಂದಿಸಲಾಯಿತು.

ವಿದ್ಯಾರ್ಥಿ ಸಂಘಗಳ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಟ್ರಸ್ಟಿ ದೇವದಾಸ್ ಹೆಗ್ಡೆ, ಪ್ರಾಂಶುಪಾಲ ಕೆ.ಪಿ. ದೇವರಾಜ್ ಉಪಸ್ಥಿತರಿದ್ದರು.