ಬೆಂಗಳೂರು: ಶಾಲಾ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ದೈಹಿಕ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಹೆಬ್ಬಾಳ ಠಾಣೆ ವ್ಯಾಪ್ತಿಯ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 55 ವರ್ಷದ ದೈಹಿಕ ಶಿಕ್ಷಕ ಅಂಜಿನಪ್ಪ ಹಲವು ತಿಂಗಳಿನಿಂದ ಕೃತ್ಯ ಎಸಗುತ್ತಿದ್ದ. ಬಾಲಕಿಯರು ನೀಡಿದ್ದ ಮಾಹಿತಿ ಆಧರಿಸಿ ಶಾಲೆಯ ಮುಖ್ಯ ಶಿಕ್ಷಕರೇ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ. ಸದ್ಯ ಈತ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಆರೋಪಿ ಅಂಜಿನಪ್ಪ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆಟ ಹಾಗೂ ಪಾಠದ ನೆಪದಲ್ಲಿ ಬಾಲಕಿಯರನ್ನು ತನ್ನ ಬಳಿ ಕರೆಸಿಕೊಳ್ಳುತ್ತಿದ್ದ ಆರೋಪಿ ವಿದ್ಯಾರ್ಥಿನಿಯರಿಗೆ ಮುತ್ತು ಕೊಡುವುದು, ಮೈ–ಕೈ ಹಾಗೂ ಇತರೆ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ.
ಶಾಲೆಯ 8 ಹಾಗೂ 9ನೇ ತರಗತಿಯ 15 ಬಾಲಕಿಯರಿಗೆ ಆರೋಪಿ ಕಿರುಕುಳ ನೀಡಿರುವುದು ತನಿಖೆಯಿಂದ ಗೊತ್ತಾಗಿದೆ. ಕೃತ್ಯಕ್ಕೆ ಸಂಬಂಧಪಟ್ಟ ಪುರಾವೆಗಳನ್ನೂ ಸಂಗ್ರಹಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.










