ತುಮಕೂರು : ವಿದ್ಯುತ್ ಕಂಬಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಿಪಟೂರು ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಎಚ್.ಬೈರಾಪುರ ಗೇಟ್ ಬಳಿ ನಡೆದಿದ್ದು, ಮೃತ ವ್ಯಕ್ತಿಯನ್ನು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಂದನಕೆರೆ ಹೋಬಳಿಯ ಲಕ್ಷ್ಮೀಪುರ ಗ್ರಾಮದ ಶ್ರೀಧರ್ (25) ಎಂದು ಗುರುತಿಸಲಾಗಿದೆ.
ತಿಪಟೂರಿನ ಹುಚ್ಚನಟ್ಟಿ ಚಿಪ್ಪು ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀಧರ್, ನಿನ್ನೆ ರಾತ್ರಿ ಕೆಲಸ ಮುಗಿಸಿಕೊಂಡು ಬೈಕಿನಲ್ಲಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಎಚ್.ಬೈರಾಪುರ ಗೇಟ್ ಬಳಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಶ್ರೀಧರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಮಂಜುನಾಥ್ ಗಾಯಗೊಂಡಿದ್ದು, ಚಿಕಿತ್ಸೆಗೆ ತಿಪಟೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊನ್ನವಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










