ವಿಷ್ಣು ಸ್ಮಾರಕದ ಬಳಿ ಇಲ್ಲ ವಿದ್ಯುತ್ ಬೆಳಕಿನ ವ್ಯವಸ್ಥೆ : ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಭಿಮಾನಿಗಳು…

41
firstsuddi

ಮೈಸೂರು : ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರು ಕೊನೆಯುಸಿರೆಳೆದು 12 ವರ್ಷಗಳ ಬಳಿಕ ಮೈಸೂರಿನಲ್ಲಿ ಅವರ ಸ್ಮಾರಕ ನಿರ್ಮಾಣವಾಗಿದೆ. ಮೈಸೂರು-ಹೆಚ್.ಡಿ.ಕೋಟೆ ರಸ್ತೆಯ ಹಾಲಾಳು ಗ್ರಾಮದಲ್ಲಿರುವ ಈ ಸ್ಮಾರಕವನ್ನು ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟನೆ ಮಾಡಿದ್ದಾರೆ. ಆದರೆ ಸ್ಮಾರಕದ ಬಳಿ ರಾತ್ರಿ ವೇಳೆ ವಿದ್ಯುತ್ ದೀಪದ ವ್ಯವಸ್ಥೆ ಮಾಡದೇ ಇರುವುದಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಬೆಳಗ್ಗೆಯಿಂದಲೇ ಸ್ಮಾರಕ ವೀಕ್ಷಣೆಗೆ ಆಗಮಿಸಿದ್ದ ಸಾರ್ವಜನಿಕರು, ಅಭಿಮಾನಿಗಳು ಮಧ್ಯಾಹ್ನ 2 ಗಂಟೆಯವರೆಗೂ ಕಾದು ಕುಳಿತಿದ್ದರು. ಬಳಿಕ ವೀಕ್ಷಣೆಗೆ ಅವಕಾಶ ಕಲ್ಪಿಸಿದ್ದು, ನಿರೀಕ್ಷೆಗೂ ಮೀರಿ ಜನಸಾಗರ ಹರಿದುಬಂದಿತ್ತು. ಸಂಜೆಯ ಸಮಯದಲ್ಲಿ ಸ್ಮಾರಕ ವೀಕ್ಷಿಸಲು ಆಗಮಿಸಿದ ಅಭಿಮಾನಿಗಳು ವಿದ್ಯುತ್ ದೀಪದ ವ್ಯವಸ್ಥೆ ಇಲ್ಲದಿರುವುದರಿಂದ ಓಡಾಡಲು ಪರದಾಡಿದರು. ರಾತ್ರಿ ಸಮಯದಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಕಲ್ಪಿಸದೇ ಕೇವಲ ಪ್ರಚಾರಕ್ಕಾಗಿ ಕಾರ್ಯಕ್ರಮ ನಡೆಸಿ ಅಭಿಮಾನಿಗಳಿಗೆ ಅವಮಾನ ಮಾಡಲಾಗಿದೆ. ಇದು ವಿಷ್ಣು ಅವರಿಗೆ ರಾಜ್ಯ ಸರ್ಕಾರ ಮಾಡಿದ ಅವಮಾನ ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದರು.

ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಇತರೆ ಯಾವುದೇ ಅಗತ್ಯ ಸೌಲಭ್ಯ ಇಲ್ಲ. 11 ಕೋಟಿ ಖರ್ಚು ಮಾಡಿ ಸ್ಮಾರಕ ಉದ್ಘಾಟನೆ ಮಾಡಲಾಗಿದೆ. ಆದರೆ, ರಾತ್ರಿ ವೇಳೆ ಸ್ಮಾರಕ ನೋಡಲು ಬರುವ ಅಭಿಮಾನಿಗಳಿಗೆ ಸೂಕ್ತ ವಿದ್ಯುತ್ ಬೆಳಕಿನ ವ್ಯವಸ್ಥೆ ಮಾಡಿಲ್ಲ. ಸರ್ಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನ ಎದ್ದು ತೋರುತ್ತಿದೆ ಎಂದು ಆಕ್ರೋಶ ಹೊರಹಾಕಿದರು.