ವೈದ್ಯರ ನಿರ್ಲಕ್ಷ್ಯದಿಂದ ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು.

27

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮಾಸುವ ಮುನ್ನವೇ ಇದೀಗ ಮತ್ತೋರ್ವ ಬಾಣಂತಿ ಮೃತಪಟ್ಟಿರುವ ಘಟನೆ ಬಿಮ್ಸ್ ಆಸ್ಪತ್ರೆಯಲ್ಲಿ ವರದಿಯಾಗಿದೆ. ಮೃತರನ್ನು ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಕೋಳೂರು ಗ್ರಾಮದ ನಿವಾಸಿ ಮಹಾದೇವಿ ಎಂದು ಗುರುತಿಸಲಾಗಿದೆ. ಮಹಾದೇವಿ ಅವರಿಗೆ ಜ.25ರಂದು ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಹೆರಿಗೆ ನಂತರ ತಾಯಿ ಮತ್ತು ಮಗು ಆರೋಗ್ಯವಾಗಿದ್ದರು. ಸಿಸೇರಿಯನ್ ಆದ 5 ದಿನಗಳ ಬಳಿಕ ಮಹಾದೇವಿ ಅವರಿಗೆ ಇನ್ಫೆಕ್ಷನ್ ಆಗಿದೆ ಎಂದು ವೈದ್ಯರು ಕುಟುಂಬಸ್ಥರ ಬಳಿ ಹೇಳಿದ್ದಾರೆ. ಆದರೆ, ಶುಕ್ರವಾರ ರಾತ್ರಿ ತೀವ್ರ ಅಸ್ವಸ್ಥವಾಗಿ ಬಾಣಂತಿ ಮಹಾದೇವಿ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಲೇ ಬಾಣಂತಿ ಮಹಾದೇವಿ ಮೃತಪಟ್ಟಿದ್ದಾರೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಬಿಮ್ಸ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.