ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದ ಹಲವೆಡೆ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ. ಅಲ್ಲದೇ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರಿನಲ್ಲೂ ಮಳೆಯಾಗಲಿದ್ದು, ಎಲ್ಲ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನಿನ್ನೆ ರಾತ್ರಿ ಬೆಂಗಳೂರು ನಗರದಲ್ಲಿ ಸಹ ಕೆಲ ಹೊತ್ತು ಮಳೆ ಸುರಿದಿದೆ. ಮುಂದಿನ 2 ದಿನ ಭಾರೀ ಮಳೆಯ ನಿರೀಕ್ಷೆ ಇರುವುದರಿಂದ ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಅ.4 ಮತ್ತು 5 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರಕ್ಕೆ 5 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ, ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು, ಪೂರ್ವ ಉತ್ತರ ಪ್ರದೇಶ, ಬಿಹಾರ, ಉಪ ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಈಶಾನ್ಯ ಭಾರತದ ಕೆಲ ರಾಜ್ಯಗಳು, ವಿದರ್ಭ, ಮರಾಠವಾಡ, ಮಧ್ಯ ಕರ್ನಾಟಕ ಮತ್ತು ತಮಿಳುನಾಡಿನ ಹೆಚ್ಚು ಮುನ್ನೆಚ್ಚರಿಕೆ ಅಗತ್ಯವಿದೆ ಎಂದು ಇಲಾಖೆ ತಿಳಿಸಿದೆ.










