ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ರಾಜೀನಾಮೆ.

56
firstsuddi

ಕೊಲಂಬೊ : ಆರ್ಥಿಕ ಬಿಕ್ಕಟ್ಟಿನಿಂದ ಶ್ರೀಲಂಕಾದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿದೆ. ಪ್ರತಿಭಟನಾಕಾರರ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜೀನಾಮೆ ಅಧಿಕೃತವಾಗಿ ಪ್ರಧಾನಿ ರನಿಲ್ ವಿಕ್ರಮಸಿಂಘೆಗೆ ತಿಳಿಸಿದ್ದಾರೆ.

ಈ ಹಿಂದೆ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಮಾಧ್ಯಮದವರೊಂದಿಗೆ ಮಾತನಾಡಿ ಶ್ರೀಲಂಕಾ ಅಧ್ಯಕ್ಷ ರಾಜಪಕ್ಷ ಅವರು ಜುಲೈ 13 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಘೋಷಿಸಿದ್ದರು. ಆದರೆ ಶನಿವಾರದಂದು ಶ್ರೀಲಂಕಾ ಅಧ್ಯಕ್ಷರ ನಿವಾಸಕ್ಕೆ ಸಾವಿರಾರು ಪ್ರತಿಭಟನಾಕಾರರು ಮುತ್ತಿಗೆ ಹಾಕಿ, ರಾಜೀನಾಮೆಗೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದೇ ರಾಜೀನಾಮೆ ನೀಡಿದ್ದಾರೆ.

ಈ ಹಿಂದೆ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ಕೂಡ ತಮ್ಮ ಸ್ಥಾನದಿಂದ ಕೆಳಗಿಳಿಯುವುದಾಗಿ ಘೋಷಿಸಿದ್ದರು. ಆದರೆ ಆರ್ಥಿಕ ಬಿಕ್ಕಟ್ಟಿನಿಂದ ರೊಚ್ಚಿಗೆದ್ದಿರುವ ಶ್ರೀಲಂಕಾ ಜನ ಎಲ್ಲೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಷ್ಟ್ರಪತಿ ಹಾಗೂ ಪ್ರಧಾನಿ ಇಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಅವರ ನಿವಾಸಗಳಿಂದ ಕದಲುವುದಿಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ. ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರ ಅಧಿಕೃತ ನಿವಾಸ ‘ಟೆಂಪಲ್ ಟ್ರೀ’ ಅನ್ನು ಆಕ್ರಮಿಸಿಕೊಂಡಿರುವ ಪ್ರತಿಭಟನಾಕಾರರು ಅಲ್ಲಿಯೇ ಮೊಕ್ಕಾಂ ಹೂಡಿದ್ದು, ನಿವಾಸದ ಆವರಣದಲ್ಲಿ ಅಡುಗೆ ಮಾಡಲು ಆರಂಭಿಸಿದ್ದಾರೆ.