ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್‌ ರಚನೆಯೋ ಕಾದು ನೋಡಿ : ಸಿಎಂ ಬೊಮ್ಮಾಯಿ.

69
firstsuddi

ಚಿತ್ರದುರ್ಗ : ಈ ಬಾರಿ ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್‌ ರಚನೆಯೋ ಕಾದು ನೋಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಜಿಲ್ಲೆಯ ಹೊಸದುರ್ಗ ಪಟ್ಟಣದ ತಾಲೂಕು ಕ್ರೀಡಾಂಗಣದ ಹೆಲಿಪ್ಯಾಡ್ ನಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ಸನ್ನಿವೇಶದಿಂದ ಚಿತ್ರದುರ್ಗದ ಸ್ಥಳೀಯ ಶಾಸಕರಿಗೆ ಸಚಿವ ಸ್ಥಾನಕ್ಕೆ ಆದ್ಯತೆ ಸಿಕ್ಕಿಲ್ಲ. ಈ ಬಾರಿ ಅವಕಾಶ ಸಿಗಲಿದೆ. ಹಾಗೆಯೇ ಕೆಲವು ಆರೋಪಗಳ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಮೇಶ್ ಜಾರಕಿಹೊಳಿ ಹಾಗೂ ಕೆ.ಎಸ್. ಈಶ್ವರಪ್ಪಗೆ ಸಚಿವ ಸ್ಥಾನ ನೀಡುವ ಬಗ್ಗೆ ಅಂತಿಮವಾಗಿ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಮಾಹಿತಿ ನೀಡಿದರು.

ಚಿತ್ರದುರ್ಗ ಭಾಗದ ಜನರ ಬಹುದಿನದ ಬೇಡಿಕೆ ತುಮಕೂರು- ದಾವಣಗೆರೆ ನೇರ ರೈಲು ಮಾರ್ಗದ ಯೋಜನೆಯ ಅನುಷ್ಠಾನಕ್ಕೆ ಕೆಲವು ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆಯ ಬಾಕಿಯಿದೆ. ಭೂ ಸ್ವಾಧೀನ ಪ್ರಕ್ರಿಯೆ ಶೀಘ್ರವಾಗಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆದಷ್ಟು ಬೇಗ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಭೂ ಸ್ವಾಧೀನಕ್ಕೆ ಅಗತ್ಯ ಇರುವ 100 ಕೋಟಿ ರೂಪಾಯಿಗಳನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಪ್ರಾಮುಖ್ಯ ಯೋಜನೆಯಾಗಿ ಪಿಐಬಿ (ಸಾರ್ವಜನಿಕ ಬಂಡವಾಳ ಹೂಡಿಕೆ ಮಂಡಳಿ)ಯಲ್ಲಿ ಅನುಮೋದನೆ ನೀಡಲಾಗಿದೆ. ಕೇಂದ್ರ ಸಚಿವ ಸಂಪುಟದಿಂದ ಅನುಮೋದನೆ ಬಾಕಿ ಇದೆ. ಭದ್ರಾ ಮೇಲ್ದಂಡೆ ಯೋಜನೆ ರಾಜ್ಯದ ಪ್ರಥಮ ರಾಷ್ಟ್ರೀಯ ನೀರಾವರಿ ಯೋಜನೆಯಾಗಲಿದೆ ಎಂದು ಹೇಳಿದರು.