ನವದೆಹಲಿ : ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹಾಗೂ ಅವರ ಸಹವರ್ತಿಗಳಿಗೆ ಸೇರಿದ ರಾಷ್ಟ್ರ ರಾಜಧಾನಿಯಲ್ಲಿರುವ ಹಲವು ಸ್ಥಳಗಳ ಮೇಲೆ ಇಂದು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕನಿಷ್ಠ 10 ವಾಸದ ಸ್ಥಳಗಳು ಮತ್ತು ವಾಣಿಜ್ಯ ಕಟ್ಟಡಗಳ ಮೇಲೆ ದಾಳಿ ನಡೆಸಲಾಗಿದೆ. ಶಾಲೆಗಳನ್ನು ನಡೆಸುವ ಪ್ರತಿಷ್ಠಿತ ಸಮೂಹ ಒಂದಕ್ಕೆ ಸೇರಿದ ಸ್ಥಳಗಳ ಮೇಲೆ ಸಹ ದಾಳಿ ನಡೆದಿದೆ. ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿವೆ ಎಂದು ತಿಳಿದು ಬಂದಿದೆ.
ದೆಹಲಿ ಸಚಿವ ಸತ್ಯೇಂದ್ರ ಜೈನ್ ಅವರನ್ನು ಅಕ್ರಮ ಹಣ ವರ್ಗಾವಣೆ ನಿಷೇಧ ಕಾಯ್ದೆಯಡಿ ಮೇ 30 ರಂದು ಬಂಧಿಸಲಾಗಿತ್ತು. ಸದ್ಯ ಬಂಧಿತ ಸಚಿವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಜಾಮೀನು ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಆದೇಶವನ್ನು ದೆಹಲಿ ನ್ಯಾಯಾಲಯ ಕಾಯ್ದಿರಿಸಿದೆ.










