ಸರಳ ಗಣೇಶೋತ್ಸವ ಆಚರಣೆ – ಮಾರ್ಗಸೂಚಿ ಹೊರಡಿಸಿದ ಉಡುಪಿ ಜಿಲ್ಲಾಧಿಕಾರಿ…

63
firstsuddi

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ನಿರ್ಬಂಧ ಹಿನ್ನಲೆಯಲ್ಲಿ ಸರಳ ಗಣೇಶೋತ್ಸವ ಆಚರಿಸಲು ಜಿಲ್ಲಾಧಿಕಾರಿ ಎಂ. ಕೂರ್ಮರಾವ್ ಅವರು ಮಾರ್ಗಸೂಚಿಸಿಗಳನ್ನು ಹೊರಡಿಸಿದ್ದಾರೆ.

ಮಾರ್ಗಸೂಚಿಗಳು ಇಂತಿವೆ :
1) ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ಮತ್ತು ತಮ್ಮ-ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ಖಾಸಗಿ ಸಾರ್ವಜನಿಕ ಬಯಲು ಪ್ರದೇಶದಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸುವುದು.
2) ಈ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವುದು, ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು.
3) ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮಲೆ 20ಕ್ಕಿಂತ ಹೆಚ್ಚಿನ ಜನ ಸೇರಿದಂತೆ ಭಕ್ತಾಧಿಗಳಿಗೆ ಅನುವು ಮಾಡುವುದು.
4) ಪಾರಂಪರಿಕ ಗಣೇಶೋತ್ಸವಕ್ಕಾಗಿ ಗಣೇಶೋತ್ಸವ ಸಮಿತಿಗಳು/ ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೋರೇಷನ್/ ಸ್ಥಳೀಯ ಆಡಳಿತದಿಂದ ಪೂರ್ವನುಮತಿಯನ್ನು ಪಡೆಯತಕ್ಕದ್ದು. ಒಂದು ನಗರ ಪ್ರದೇಶಗಳಲ್ಲಿ ವಾರ್ಡಿಗೆ ಒಂದರಂತೆ ಸಾರ್ವಜನಿಕ ಗಣೇಶೋತ್ಸವನ್ನು ಮಾತ್ರ ಆಚರಿಸಲು ಪ್ರೋತ್ಸಾಹಿಸುವುದು. ಗಣೇಶ ಆಚರಣೆಯನ್ನು ಗರಿಷ್ಠ 5 ದಿನಗಳಿಗಿಂತ ಹೆಚ್ಚಿನ ದಿನ ಆಚರಿಸುವಂತಿಲ್ಲ. ನಗರ ಪ್ರದೇಶಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಂದ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯತ್ ಗಳಿಂದ ಪೂರ್ವನುಮತಿಯನ್ನು ಪಡೆಯತಕ್ಕದ್ದು.)
5) ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಯಾವುದೇ ಅಡ್ಡಿಯಾಗದಂತೆ ಶ್ರೀ ಗಣೇಶ ಪ್ರತಿಷ್ಠಾಪನೆ ಮಾಡಬೇಕು.
6) ಶ್ರೀ ಗಣೇಶ ಆಚರಣೆಯ ಆಯೋಜಕರು ಕೋವಿಡ್-19 ನೆಗೆಟಿವ್ ರಿಪೋರ್ಟ್ ಮತ್ತು ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯ.
7) ಶ್ರೀ ಗಣೇಶ ಆಚರಣೆಯನ್ನು ಆಯೋಜಿಸುವ ಸ್ಥಳದಲ್ಲಿ ಸ್ಥಳೀಯ ಮಟ್ಟದಲ್ಲಿ ಆಯೋಜಕರು ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು.
8) ಶ್ರೀ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿ ಸಾಂಸ್ಕೃತಿಕ/ ಸಂಗೀತ/ನೃತ್ಯ ಹಾಗೂ ಮುಖ್ಯವಾಗಿ ಡಿ.ಜೆ.ಯ ಮೂಲಕ ಹಾಗೂ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.
9) ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭದಲ್ಲಿ ಯಾವುದೇ ಮೆರವರಣಿಗೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.
10) ಪಾರಂಪರಿಕ ಗಣೇಶ ಮೂರ್ತಿ ವಿಗ್ರಹಗಳನ್ನು ಮಹಾನಗರ ಪಾಲಿಕೆ ಜಿಲ್ಲಾಡಳಿತ ಹತ್ತಿರದ ಸ್ಥಳೀಯ ಸಂಸ್ಥೆಗಳ/ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್ ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ ಗಳಲ್ಲಿ ವಿಸರ್ಜಿಸುವುದು.
11) ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು. ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್ ಹಾಗೂ ಧರ್ಮಲ್ ಸ್ಟೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದು.
12) ದರ್ಶನಕ್ಕಾಗಿ ಬರುವ ಭಕ್ತಾಧಿಗಳಿಗೆ ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು. ಭಕ್ತಾಧಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಿರತಕ್ಕದ್ದು.
13) ಶ್ರೀ ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ, ಜಿಲ್ಲಾಡಳಿತ, ಪೊಲೀಸ್ ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ/ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.