ಸರ್ಕಾರಿ ಶಾಲೆ ಮಕ್ಕಳಿಗೆ ಸಮವಸ್ತ್ರ ನೀಡದ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ…

47
firstsuddi

ಬೆಂಗಳೂರು : ಸರ್ಕಾರಿ ಶಾಲೆಗಳಿಗೆ ನೀಡಲಾಗುವ ಸಮವಸ್ತ್ರದಲ್ಲಿ ಮಲತಾಯಿ ಧೋರಣೆ ನಡೆಸಲಾಗುತ್ತಿರುವ ಬಗ್ಗೆ ಕರ್ನಾಟಕ ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಗರಂ ಆದ ಹೈಕೋರ್ಟ್ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಉತ್ಸವಗಳನ್ನು ನಡೆಸಲಾಗುತ್ತದೆ, ಸರ್ಕಾರಿ ಶಾಲೆ ಮಕ್ಕಳಿಗೆ ಸಮವಸ್ತ್ರ ನೀಡಲು ಆಗುದಿಲ್ವಾ? ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ನಾಚಿಕೆಯಾಗಬೇಕು ಎಂದು ಛೀಮಾರಿ ಹಾಕಿದೆ.

ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲುಚೀಲಗಳನ್ನು ನೀಡಬೇಕು ಎಂದು 2018ರ ಆಗಸ್ಟ್ ನಲ್ಲಿ ಹೈಕೋರ್ಟ್ ಹೊರಡಿಸಿರುವ ಆದೇಶ ಪಾಲನೆಯಾಗಿಲ್ಲ ಎಂದು ಆರೋಪಿಸಿ ಕೊಪ್ಪಳ ಜಿಲ್ಲೆಯ ಮಾಸ್ಟರ್ ಮಂಜುನಾಥ್ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ವಿಭಾಗೀಯ ನ್ಯಾಯಪೀಠ ನಿನ್ನೆ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಸರ್ಕಾರ ಸಲ್ಲಿಸಿದ ಪ್ರಮಾಣ ಪತ್ರದಲ್ಲಿನ ಲೋಪವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಮೂರ್ತಿ ಬಿ.ವೀರಪ್ಪ ಅವರು, ಸರಿಯಾದ ರೀತಿಯಲ್ಲಿ ಸಮವಸ್ತ್ರವನ್ನು ಯಾಕೆ ನೀಡಿಲ್ಲ? ಸಮವಸ್ತ್ರ, ಶೂ, ಕಾಲುಚೀಲ ವಿತರಣೆ ಹೊಣೆ ಹೊತ್ತಿರುವ ಅಧಿಕಾರಿ ಯಾರು ಎಂಬುದನ್ನು ತಿಳಿಸಿ. ಅವರ ವಿರುದ್ಧ ನ್ಯಾಯಾಂಗ ನಿಂದನೆ ಆರೋಪನಿಗದಿ ಮಾಡಲಾಗುತ್ತದೆ ಎಂದು ಸರ್ಕಾರಿ ವಕೀಲರಿಗೆ ತಾಕೀತು ಮಾಡಿದರು.

ಎರಡು ಜೊತೆ ಸಮವಸ್ತ್ರಕ್ಕೆ ಹಣ ಕಳುಹಿಸಿರುವುದಾಗಿ ಪ್ರಮಾಣ ಪತ್ರದಲ್ಲಿ ಹೇಳಲಾಗಿದೆ. ಆದರೆ, ದಾಖಲೆಗಳನ್ನು ನೋಡಿದರೆ ಒಂದು ಜೊತೆಗೆ ಮಾತ್ರವೇ ಹಣ ಒದಗಿಸಿರುವುದು ಕಾಣುತ್ತಿದೆ. ಒಂದು ಕಾಲುಚೀಲ ಮತ್ತು ಒಂದು ಶೂಗಷ್ಟೇ ಹಣ ಕಳುಹಿಸಿರಬೇಕು. ಫಲಾನುಭವಿ ಮಕ್ಕಳಿಗೆ ದಕ್ಕಬೇಕಾದ ಸಮವಸ್ತ್ರ, ಶೂ-ಕಾಲುಚೀಲಗಳು ದಕ್ಕಿವೆಯೇ ಎಂಬುದು ಆ ದೇವರಿಗೆ ಮಾತ್ರವೇ ಗೊತ್ತು ಎಂದು ವ್ಯಂಗ್ಯವಾಡಿದರು.

ಮಕ್ಕಳ ಶೈಕ್ಷಣಿಕ ಬದುಕನ್ನು ಹೀಗೆ ಮಾಡಿದರೆ ಏನು ಕತೆ? ಸಮವಸ್ತ್ರ ಕೊಡುವುದಾದರೆ ಸೂಕ್ತ ರೀತಿಯಲ್ಲಿ ಕೊಡಿ. ಇಲ್ಲವಾದರೆ ಬೇಡವೇ ಬೇಡ. ಮಕ್ಕಳ ಮನಸ್ಸು ಒಮ್ಮೆ ಹಾಳಾದರೆ ಜೀವನಪೂರ್ತಿ ಆ ನೋವು ಅವರನ್ನು ಕಾಡುವುದಿಲ್ಲವೇ? ಅಧಿಕಾರಿಗಳಿಗೆ ಸರ್ಕಾರಿ ಶಾಲಾ ಮಕ್ಕಳ ಬಗ್ಗೆ ಮಾನವೀಯತೆಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಅಂತಿಮವಾಗಿ ಎರಡು ವಾರಗಳ ಕಾಲಾವಕಾಶ ನೀಡಲಾಗುವುದು. ಅಷ್ಟರಲ್ಲಿ ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಯ ವಿರುದ್ಧ ನ್ಯಾಯಾಂಗ ನಿಂದನೆಯ ಆರೋಪ ನಿಗದಿ ಮಾಡಲಾಗುತ್ತದೆ. ಅಂದು ಅವರು ನ್ಯಾಯಾಲಯದ ಮುಂದೆ ಹಾಜರಿರಬೇಕು ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿದರು.

ವಿಚಾರಣೆ ವೇಳೆ ಕರ್ನಾಟಕ ಸಮಗ್ರ ಶಿಕ್ಷಣ ಯೋಜನೆಯ ನಿರ್ದೇಶಕಿ ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿದರು. ರಾಜ್ಯ ಸರ್ಕಾರ 2021ರ ಆಗಸ್ಟ್ 28ರಂದು ಹೊರಡಿಸಿರುವ ಆದೇಶದ ಅನುಸಾರ 2021-2022ರ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಒಂದು ಜೊತೆ ಸಮವಸ್ತ್ರ ನೀಡಲಾಗಿದೆ. ಇದರಲ್ಲಿ ಎರಡನೇ ಜೊತೆ ಸಮವಸ್ತ್ರ ಖರೀದಿಸಲು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಂಬಂಧಿಸಿದ ಎಸ್ ಡಿಎಂಸಿಯ ಖಾತೆಗೆ ಹಣ ವರ್ಗಾಯಿಸಲಾಗಿದೆ. 2019-20ನೇ ಸಾಲಿನಲ್ಲಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲುಚೀಲಗಳನ್ನು ಖರೀದಿಸಲು ಸಂಬಂಧಿಸಿದ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಎಸ್ ಡಿಎಂಸಿಯ ಜಂಟಿ ಖಾತೆಗೆ ಅಗತ್ಯ ಹಣ ವರ್ಗಾಯಿಸಲಾಗಿದೆ ಎಂದು ವಿವರಿಸಿದರು.