ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಗೆ ತೆರಳಿದ್ದು, ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲಿದ್ದಾರೆ ಎನ್ನಲಾಗಿದೆ.
ಇಂದು ರಾತ್ರಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿರುವ ಸಿಎಂ, ನಾಳೆ ಬೆಳಗ್ಗೆ 8 ಗಂಟೆಗೆ ಅಂತಾರಾಜ್ಯ ಜಲವ್ಯಾಜ್ಯಗಳ ಕುರಿತು ದೆಹಲಿಯಲ್ಲಿ ನಮ್ಮ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕಾನೂನು ತಜ್ಞರ ಜೊತೆ ಸಭೆ ನಡೆಸಿ ಚರ್ಚಿಸಲಿದ್ದಾರೆ. ನಂತರ ವಿವಿಧ ಇಲಾಖೆಗಳ ಅಭಿವೃದ್ಧಿ ಕುರಿತು ಕೇಂದ್ರ ಸಚಿವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ.
ಸದ್ಯ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಗೆ ಸಮಯ ನಿಗದಿಯಾಗಿದೆ. ಇದರ ಜೊತೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿಗೆ ಸಿಎಂ ಸಮಯಾವಕಾಶ ಕೋರಿದ್ದಾರೆ.
ಈಗಾಗಲೇ ಕೇಂದ್ರದ ನಾಯಕರು ಪಂಚ ರಾಜ್ಯಗಳ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಕಾರ್ಯಮಗ್ನರಾಗಿದ್ದು, ದೆಹಲಿಗೆ ಭೇಟಿ ನೀಡಲಿರುವ ಬೊಮ್ಮಾಯಿಯವರಿಗೆ ಪಕ್ಷದ ವರಿಷ್ಠರ ಭೇಟಿಗೆ ಅವಕಾಶ ಸಿಕ್ಕಲ್ಲಿ ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕಾತಿ ಕುರಿತು ಚರ್ಚೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ.










