ಸಿಎಂ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ – ಕಾಂಗ್ರೆಸ್ ನಾಯಕರು ಪೊಲೀಸ್ ವಶಕ್ಕೆ…

48
firstsuddi

ಬೆಂಗಳೂರು : ಭ್ರಷ್ಟಾಚಾರ ಆರೋಪದ ಕಾರಣ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಸಿಎಂ ನಿವಾಸದತ್ತ ಹೊರಟಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿತ್ತು. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ರಾಮಲಿಂಗಾರೆಡ್ಡಿ, ಶಾಸಕ ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್, ಪಕ್ಷದ ಹಿರಿಯ ಮುಖಂಡರುಗಳು, ಸಂಸದರು, ಶಾಸಕರು ಭಾಗಿಯಾಗಿದ್ದರು. ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದ ಕಾಂಗ್ರೆಸ್ ನಾಯಕರನ್ನು ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನ ಬಳಿಯೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆ ವೇಳೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ, ಬಿಜೆಪಿ ಅಂದರೆ ಭ್ರಷ್ಟಾಚಾರ ಜನತಾ ಪಾರ್ಟಿ. ರಾಜ್ಯದಲ್ಲಿ ಇರುವುದು ಭ್ರಷ್ಟಾಚಾರದ ಸರ್ಕಾರ. ಪ್ರತಿಯೊಂದು ಕೆಲಸಕ್ಕೂ 40 ಪರ್ಸೆಂಟ್ ಕಮಿಷನ್ ಕೇಳುತ್ತಾರೆ. ರಾಜ್ಯದ ಜನರ ಹಣವನ್ನೂ ಲೂಟಿ ಮಾಡುತ್ತಿದ್ದಾರೆ. ಕಮಿಷನ್ ನೀಡಲಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮಿಷನ್ ಬಗ್ಗೆ ಪ್ರಧಾನಿ ಮೋದಿಗೆ ಕೆಂಪಣ್ಣ ದೂರು ನೀಡಿದ್ದಾರೆ. ಆದರೆ ಪ್ರಧಾನಿಗಳಿಂದ ಯಾವುದೇ ಉತ್ತರ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ಶಾಸಕ ಮಾಡಾಳ್‌ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಆಗಿದೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.

ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಿ ಕೈ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ಬಿಜೆಪಿ ಶಾಸಕ ಮಾಡಾಳ್ ವಿರುದ್ಧ ಬಿಜೆಪಿಯ ರೋಲ್ ಕಾಲ್ “ಮಾಡೆಲ್” ವಿರೂಪಾಕ್ಷಪ್ಪ ಎಂಬ ಪೋಸ್ಟರ್​​ನ್ನು ಅಂಟಿಸಿದರು.