ಸಿಎಂ ಸಿದ್ದರಾಮಯ್ಯ ಸೇರಿ ಮತ್ತಿತರ ಕಾಂಗ್ರೆಸ್ ನಾಯಕರಿಗೆ ರೂ.10 ಸಾವಿರ ದಂಡ- ಹೈಕೋರ್ಟ್ ಆದೇಶ…

35
firstsuddi

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಮತ್ತಿತರ ಕಾಂಗ್ರೆಸ್ ನಾಯಕರಿಗೆ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿದೆ.

2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ರೇಸ್‌ಕೋರ್ಸ್‌ ರಸ್ತೆಯಲ್ಲಿ ಪ್ರತಿಭಟಿಸಿದ್ದರು.

ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಸಿದ್ದರಾಮಯ್ಯ, ರಾಜ್ಯ ಸಂಪುಟದ ಸಚಿವರಾದ ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕರ್ನಾಟಕ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಸೂಚಿಸಿದೆ.

ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ, ಮಾರ್ಚ್ 7 ರಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, 11 ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಆರ್ ಎಸ್ ಸುರ್ಜೇವಾಲಾ ಮತ್ತು ಮಾರ್ಚ್ 15 ರಂದು ಭಾರೀ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಜರಾಗುವಂತೆ ಸೂಚಿಸಲಾಗಿದೆ.

ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ ನಡೆಸುವಂತಿಲ್ಲ. ಪೊಲೀಸರಿಂದ ಅನುಮತಿ ಪಡೆದವರಿಗೆ ಮಾತ್ರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಲು ಅವಕಾಶ ನೀಡಲಾಗುತ್ತದೆ. ಬೇರೆ ಕಡೆ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ಕೇಸ್ ಹಾಕಲಾಗುತ್ತದೆ.