ತಮಿಳುನಾಡು : ರಕ್ಷಣಾ ಸಿಬ್ಬಂದಿ ಮುಖ್ಯಸ್ಥ(ಸಿಡಿಎಸ್)ಬಿಪಿನ್ ರಾವತ್ ಹಾಗೂ ಇತರೆ ಹಿರಿಯ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡಿದೆ.
ಸೇನಾ ಹೆಲಿಕಾಪ್ಟರ್ ನಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ವೆಲ್ಲಿಂಗ್ಟನ್ ಸೇನಾ ಕೇಂದ್ರಕ್ಕೆ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ವಾಯುಪಡೆಯ Mi-17V5 ಹೆಲಿಕಾಪ್ಟರ್ನಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ಅಧಿಕಾರಿಗಳಾದ ಗುರುಸೇವಕ್ ಸಿಂಗ್, ಜಿತೇಂದ್ರ ಕುಮಾರ್, ವಿವೇಕ್ ಕುಮಾರ್, ಸಾಯಿತೇಜಾ, ಸತ್ಪಾಲ್ ಅವರೊಂದಿಗೆ ಪ್ರಯಾಣಿಸುತ್ತಿದ್ದರು.
ಘಟನೆಯಲ್ಲಿ ಸಿಡಿಎಸ್ ಜನರಲ್ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್ ಸೇರಿ 11 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಇನ್ನು ಬಿಪಿನ್ ರಾವತ್ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದ್ದು, ಇನ್ನೂ ಮೃತರು, ಗಾಯಗೊಂಡವರು ಯಾರು ಎಂಬ ಬಗ್ಗೆ ನಿಖರ ಮಾಹಿತಿ ದೊರೆತಿಲ್ಲ.










