ಸಿದ್ದರಾಮಯ್ಯ ಸೇರಿ ಇತರ ಕಾಂಗ್ರೆಸ್ ನಾಯಕರ ವಿರುದ್ಧದ ವಿಚಾರಣೆಗೆ ಸುಪ್ರೀಂ ತಡೆ…

46
firstsuddi

ಬೆಂಗಳೂರು: 2022 ರಲ್ಲಿ ರಾಜ್ಯದಲ್ಲಿ ನಡೆದಿದ್ದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಚಿವ ಕೆ.ಎಸ್ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ 2022 ರಲ್ಲಿ ಅಂದು ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಹಿನ್ನೆಲೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ರಣದೀಪ್ ಸಿಂಗ್ ಸುರ್ಜೇವಾಲ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯ ಆರೋಪಿಗಳು ನ್ಯಾಯಾಲಯದ ಮುಂದೆ ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಆದೇಶಿಸಿತ್ತು. ಈ ಆದೇಶವನ್ನು ರದ್ದುಗೊಳಿಸಲು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಪ್ರಕರಣ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್, ಅರ್ಜಿದಾರರಿಗೆ ತಲಾ 10,000 ವೆಚ್ಚ ಭರಿಸಲು ಆದೇಶಿಸಿತ್ತು. ಈ ಹಿನ್ನೆಲೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಮತ್ತು ಇತರೆ ನಾಯಕರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿ ಪ್ರಕರಣ ರದ್ದು ಕೋರಿದ್ದರು.

ಇಂದು ಸುಪ್ರೀಂಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿದ್ದು, ಆರು ವಾರಗಳಲ್ಲಿ ಉತ್ತರಿಸುವಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು. ಅಲ್ಲದೇ ಪ್ರಕರಣದ ಮುಂದಿನ ವಿಚಾರಣೆಗೆ ತಡೆ ನೀಡಿತು. ಇದೇ ವೇಳೆ ಅರ್ಜಿದಾರರಿಗೆ ತಲಾ 10,000 ರೂ.ಗಳ ವೆಚ್ಚವನ್ನು ವಿಧಿಸಿದ ಕರ್ನಾಟಕ ಹೈಕೋರ್ಟ್‌ನ ಆದೇಶಕ್ಕೂ ತಡೆ ನೀಡಿತು.