ರಾಮನಗರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನಡುವಿನ ಜಟಾಪಟಿಯಿಂದಾಗಿ ಚನ್ನಪಟ್ಟಣದ ಭೈರಾಪಟ್ಟಣ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ. ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಮೊಟ್ಟೆ ಹಾಗೂ ಕಲ್ಲನ್ನು ಜೆಡಿಎಸ್ ಕಾರ್ಯಕರ್ತರು ಎಸೆದಿದ್ದಾರೆ. ಇದನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಚನ್ನಪಟ್ಟಣ ತಾಲ್ಲೂಕಿನ ರಸ್ತೆಗಳ ಅಭಿವೃದ್ಧಿಗಾಗಿ ಸಿಎಂ ಬೊಮ್ಮಾಯಿ 50 ಕೋಟಿ ರೂ ವಿಶೇಷ ಅನುದಾನ ಬಿಡುಗಡೆ ಮಾಡಿದ್ದರು. ಇಂದು ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮ ನಡೆದಿದೆ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ್ ಇಂದು ಚನ್ನಪಟ್ಟಣ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಬೇಕಿತ್ತು. ಆದರೆ ಅವರು ಗೈರಾದ ಹಿನ್ನೆಲೆ ಯೋಗೇಶ್ವರ್ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.
ಈ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಆಹ್ವಾನಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಯೋಗೇಶ್ವರ್ ಶೇ 40 ಕಮಿಷನ್ ಗಾಗಿಯೇ ಈ ಕಾಮಗಾರಿಗಳಿಗೆ ಚಾಲನೆ ಕೊಡಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು. ಘಟನೆಗೆ ಸಂಬಂಧಿಸಿ ಪ್ರತಿಭಟನಾಕಾರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿ ಜೆಡಿಎಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.










