ಕೋಲ್ಕತ್ತಾ(ಪಶ್ಚಿಮ ಬಂಗಾಳ) : ಪಶ್ಚಿಮ ಬಂಗಾಳದ ದೊಮೊಹಾನಿ ಬಳಿ ಗುವಾಹಟಿ-ಬಿಕನೇರ್ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿದ್ದು, ಘಟನೆಯಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಬಿಕಾನೇರ್-ಗುವಾಹಟಿ ಎಕ್ಸ್‌ಪ್ರೆಸ್ ರೈಲಿನ 12 ಬೋಗಿಗಳು ನಿನ್ನೆ ಜಲ್ಪೈಗುರಿ ಜಿಲ್ಲೆಯ ದೊಮೊಹಾನಿ ಬಳಿ ಹಳಿತಪ್ಪಿ ಮಗುಚಿ ಬಿದ್ದವು. ದುರ್ಘಟನೆಯಲ್ಲಿ 42ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಪ್ರಾಥಮಿಕ ತನಿಖೆ ಪ್ರಕಾರ, ಎಂಜಿನ್ ಉಪಕರಣಗಳಲ್ಲಿ ದೋಷವೇ ಅಪಘಾತಕ್ಕೆ ಕಾರಣ ಎಂದು ಕಂಡುಬಂದಿದ್ದು, ರೈಲ್ವೆ ಸುರಕ್ಷತಾ ಆಯೋಗ ಅಪಘಾತಕ್ಕೆ ನಿಖರ ಮೂಲ ಕಾರಣದ ತನಿಖೆ ನಡೆಸಲಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ದೂರವಾಣಿ ಕರೆ ಮಾಡಿ, ಮಾಹಿತಿ ಪಡೆದುಕೊಂಡಿದ್ದು ರಕ್ಷಣಾ ಕಾರ್ಯಾಚರಣೆ ಬಗ್ಗೆ ನಿಗಾ ವಹಿಸುವಂತೆ ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ.
ಇನ್ನು, ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂ, ಗಂಭೀರವಾಗಿ ಗಾಯಗೊಂಡಿರುವರಿಗೆ 1 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗಳಾಗಿರುವವರಿಗೆ 25 ಸಾವಿರ ರೂ. ಪರಿಹಾರ ನೀಡುವುದಾಗಿ ಕೇಂದ್ರ ರೈಲ್ವೆ ಇಲಾಖೆ ಘೋಷಿಸಿದೆ.