ಹಾಸನದಲ್ಲಿ ಹಸೆಮಣೆ ಏರಬೇಕಿದ್ದ ಕಾನ್‍ಸ್ಟೇಬಲ್ ನ ಬರ್ಬರ ಕೊಲೆ.

49

ಹಾಸನ: ಪೊಲೀಸ್ ಕಾನ್‍ಸ್ಟೇಬಲ್ ಒಬ್ಬರನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದಿರುವ ಪ್ರಕರಣ ಹಾಸನ ತಾಲೂಕಿನ ದುದ್ದ ಸಮೀಪ ಸೋಮವಾರ ರಾತ್ರಿ ನಡೆದಿದೆ. ಅರಸೀಕೆರೆ ತಾಲೂಕಿನ ಬಾಗೇಶಪುರ ಗ್ರಾಮದ ಹರೀಶ್ (32) ಕೊಲೆಯಾದವರು. ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್‍ಸ್ಟೇಬಲ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಹರೀಶ್ ಅವರಿಗೆ ಇದೇ ನವೆಂಬರ್ 11 ರಂದು ಮದುವೆ ನಿಶ್ಚಯವಾಗಿತ್ತು. ಸೋಮವಾರ ರಾತ್ರಿ ತನ್ನ ಸ್ನೇಹಿತರಿಗೆ ಹಾಗೂ ಸಂಬಂಧಿಕರಿಗೆ ಲಗ್ನಪತ್ರಿಕೆ ಕೊಟ್ಟು ಹರೀಶ್ ಮನೆಗೆ ವಾಪಸಾಗುತ್ತಿದ್ದರು. ಈ ವೇಳೆ ದುದ್ದ ಗ್ರಾಮದ ಸೈ ಲ್ಯಾಂಡ್ ಹೋಟೆಲ್ ಸಮೀಪ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಮನಸೋಇಚ್ಛೆ ಹಲ್ಲೆ ಮಾಡಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಹಸೆಮಣೆ ಎರಬೇಕಿದ್ದ ಹರೀಶ್ ದಾರುಣವಾಗಿ ಸಾವನ್ನಪ್ಪಿದ್ದಾರೆ. ಎಸ್‍ಪಿ ಮಹಮದ್ ಸುಜಿತಾ ಹಾಗೂ ದುದ್ದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ದುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈಗಾಗಲೇ ಮೂವರು ಆರೋಪಿಗಳನ್ನು ಗುರುತಿಸಿರುವ ಪೊಲೀಸರು, ಇಂದು ಸಂಜೆಯೊಳಗೆ ಪ್ರಮುಖ ಆರೋಪಿಯನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.