ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಿಸದೇ ನಿಧನ…

63
firstsuddi

ಬೆಂಗಳೂರು : ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಜನರಲ್ ಸಿಡಿಎಸ್ ಬಿಪಿನ್ ರಾವತ್ ಸೇರಿ 13 ಮಂದಿ ಮೃತಪಟ್ಟಿದ್ದರು. ಆದರೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ತೀವ್ರ ಗಾಯಗೊಂಡು ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವೆಲ್ಲಿಂಗ್ಟನ್ ಆಸ್ಪತ್ರೆಯಿಂದ ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ನಿಧನಕ್ಕೆ ಭಾರತೀಯ ವಾಯುಪಡೆ ತೀವ್ರ ಸಂತಾಪ ಸೂಚಿಸಿದೆ. ವೀರಯೋಧ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ ತುಂಬ ನೋವು ತಂದಿದೆ. ಡಿ.8ರ ಅವಘಡದಲ್ಲಿ ಅವರು ಗಾಯಗೊಂಡಿದ್ದರು. ವರುಣ್ ಸಿಂಗ್ ಕುಟುಂಬದೊಂದಿಗೆ ನಾವು ಇದ್ದೇವೆ ಎಂದು ಟ್ವೀಟ್ ಮಾಡಿದೆ.

ಇನ್ನೂ ಪ್ರಧಾನಿ ನರೇಂದ್ರ ಮೋದಿಯವರು ವರುಣ್ ಸಿಂಗ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದು, ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ರಾಷ್ಟ್ರಕ್ಕೆ ಹೆಮ್ಮೆ. ಅವರು ಶೌರ್ಯ ಮತ್ತು ಅತ್ಯಂತ ವೃತ್ತಿಪರತೆಯೊಂದಿಗೆ ಸೇವೆ ಸಲ್ಲಿಸಿದ್ದಾರೆ. ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ದೇಶಕ್ಕೆ ಅವರ ಉತ್ಕೃಷ್ಟ ಸೇವೆ ಎಂದಿಗೂ ಮರೆಯಲಾಗದು. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.