ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ದೆಹಲಿ ವಿಶೇಷ ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಜೊತೆಗೆ 50 ಲಕ್ಷ ರೂಪಾಯಿ ದಂಡ ವಿಧಿಸಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲ ದೋಷಿ ಎಂದು ದೆಹಲಿಯ ಸಿಬಿಐ ಕೋರ್ಟ್ ಕಳೆದ ಶನಿವಾರ ತೀರ್ಪು ನೀಡಿತ್ತು. ಇದರ ಬೆನ್ನಲ್ಲೇ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.
1993 ಮತ್ತು 2006 ರ ನಡುವೆ 6.09 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಕ್ರೋಢೀಕರಿಸಿದ ಆರೋಪದ ಮೇಲೆ ಮಾರ್ಚ್ 26, 2010 ರಂದು ಕೇಂದ್ರೀಯ ತನಿಖಾ ದಳವು ಚೌಟಾಲ ವಿರುದ್ಧ ಚಾರ್ಜ್ ಶೀಟ್ ಅನ್ನು ಸಲ್ಲಿಸಿತು. ಸಿಬಿಐ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಈ ತೀರ್ಪು ನೀಡಿದ್ದು, ಭ್ರಷ್ಟಾಚಾರ ತಡೆ ಕಾಯಿದೆ, 1988 ರ 13 (2) ಸೆಕ್ಷನ್ 13 (1) (ಇ) ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.
ಚೌಟಾಲ ಮತ್ತು ಅವರ ಮಗ ಅಜಯ್ 2013ರಲ್ಲಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ನಂತರ ಅವರಿಗೆ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆ ಬಳಿಕ ಚೌಟಾಲ 2021ರ ಜುಲೈನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಮತ್ತೆ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ.










