ಅನಧಿಕೃತ ಕಟ್ಟಡ ಸಮೀಕ್ಷೆಗಳ ತೆರವು, ಕಾನೂನು ತಿದ್ದುಪಡಿ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ: ಡಿ.ಕೆ.ಶಿವಕುಮಾರ್.

29

ಬೆಂಗಳೂರು: ನಗರದಲ್ಲಿ ಮಳೆಯಿಂದಾಗಿ ಉಂಟಾದ ಸಮಸ್ಯೆಗಳ ಬಗ್ಗೆ ಹಾಗೂ ಇತರ ವಿಷಯಗಳ ಕುರಿತು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಗುರುವಾರ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಹಾಗೂ ಅಧಿಕಾರಿಗಳಿಗೆ ನೀಡಿರುವ ಸೂಚನೆಗಳ ಬಗ್ಗೆ ಮಾಹಿತಿ ನೀಡಿದರು.
ಎಲ್ಲ ಕೆರೆಗಳ ನಡುವೆ ಸಂಪರ್ಕ ಏರ್ಪಡಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಮಳೆ ಸರಿಯಾಗಿ ಬರದಿದ್ದಾಗ ಬರಗಾಲದಲ್ಲಿ ಕೆರೆಗಳು ಬತ್ತಿ ಹೋಗಿದ್ದವು. ಕೆರೆಗಳು ತುಂಬಬೇಕು, ಅಂತರ್ಜಲ ಹೆಚ್ಚಬೇಕು. ಇ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ಕೆರೆಗಳಿಗೆ ಕೊಳಚೆ ನೀರನ್ನು ಹರಿಸಬಾರದು. ಕೇವಲ ಮಳೆ ನೀರು ಹೋಗುವಂತೆ ನೋಡಿಕೊಳ್ಳಬೇಕು. ಹೀಗಾಗಿ ಎಲ್ಲಾ ಕೆರೆಗಳ ನಡುವೆ ಸಂಪರ್ಕ, ರಾಜಕಾಲುವೆ ಪಕ್ಕ 50 ಅಡಿ ಅಂತರದಲ್ಲಿ ಕಟ್ಟಡ ನಿರ್ಮಾಣಕ್ಕೆ ತಡೆ, ರಾಜಕಾಲುವೆ ಪಕ್ಕದಲ್ಲಿ 300 ಕಿ.ಮೀ. ಉದ್ದದ ರಸ್ತೆ ನಿರ್ಮಾಣ ಕಾರ್ಯ, ಚರಂಡಿಗಳ ಹೂಳೆತ್ತುವುದು, ಅನಧಿಕೃತವಾಗಿ ಕಟ್ಟಿರುವ ಕಟ್ಟಗಳ ಸಮೀಕ್ಷೆ ನಡೆಸಿ ಅವುಗಳನ್ನು ತೆರವುಗೊಳಿಸಲು ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.