ಕಲಬುರಗಿ: ಅನ್ಯಕೋಮಿನ ಯುವತಿಯನ್ನು ಪ್ರೀತಿಸುತ್ತಿದ್ದ ಯುವಕನನ್ನ ಬರ್ಬರವಾಗಿ ಹತ್ಯೆಗೈದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
ವಾಡಿ ಪಟ್ಟಣದ ಭೀಮನಗರ ಬಡಾವಣೆ ನಿವಾಸಿ ವಿಜಯ ಕಾಂಬಳೆ (25) ಕೊಲೆಯಾದ ದುರ್ದೈವಿ. ಎಂದಿನಂತೆ ವಾಡಿ ಪಟ್ಟಣದಲ್ಲಿ ಓಡಾಡಿಕೊಂಡಿದ್ದ ವಿಜಯನನ್ನು ರೈಲ್ವೆ ತಡೆಗೋಡೆ ಹತ್ತಿರ ತಡೆದು ಜಗಳ ತೆಗೆದ ದುಷ್ಕರ್ಮಿಗಳು, ಮಾರಕಾಸ್ತ್ರ, ಕಲ್ಲು, ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದಾಗಿ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ವಿಜಯ ಅನ್ಯಕೋಮಿನ ಯುವತಿಯನ್ನು ಪ್ರೀತಿ ಮಾಡುತ್ತಿದ್ದನು. ಇದೇ ಕಾರಣಕ್ಕೆ ಯುವತಿಯ ಕುಟುಂಬಸ್ಥರು ವಿಜಯನನ್ನು ಕೊಲೆಗೈದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿದ ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ. ಈ ಬಗ್ಗೆ ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










