ಚಂಡೀಗಢ : ಪಕ್ಕದ ಮನೆಯ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುಗ್ರಾಮದ ಹಳ್ಳಿಯೊಂದರಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಲಾಲ್ ಸಿಂಗ್ (88) ಅತ್ಯಾಚಾರವೆಸಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಚಿಕ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದಿಂದ ವೃದ್ಧನು ಎಲ್ಲಿ ನಾನು ಸಿಕ್ಕಿ ಬೀಳುತ್ತೇನೆ ಎಂಬ ಭಯದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಪೊಲೀಸರ ಪ್ರಕಾರ, ಮೃತ ವೃದ್ಧ ಲಾಲ್ ಸಿಂಗ್ ವಿರುದ್ಧ ಫೋಕ್ಸೊ ಕಾಯ್ದೆಯಡಿ ಎಫ್ ಐಆರ್ ದಾಖಲಿಸಲಾಗಿತ್ತು. ತಾನು ಜೈಲಿಗೆ ಹೋದರೆ ಮರ್ಯಾದೆ ಹೋಗುತ್ತದೆ ಎಂಬ ಭೀತಿಯಲ್ಲಿ ಲಾಲ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ. ವೃದ್ಧನ ಶವವು ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವೃದ್ಧನ ಶವದ ಹತ್ತಿರ ಯಾವುದೇ ಡೆತ್ ನೋಟ್ ಕಂಡುಬಂದಿಲ್ಲ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಅತ್ಯಾಚಾರಕ್ಕೊಳಗಾದ ಬಾಲಕಿಯ ತಾಯಿ ನೀಡಿದ ದೂರಿನನ್ವಯ, ಆ ವೃದ್ಧ ಬಾಲಕಿಗೆ ಸಿಹಿತಿಂಡಿ ಕೊಡಿಸುವುದಾಗಿ ನಂಬಿಸಿದ್ದಾನೆ. ನಂತರ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಕಳೆದ ಹಲವು ದಿನಗಳಿಂದ ಆ ವೃದ್ಧ ತನಗೆ ಕಿರುಕುಳ ನೀಡುತ್ತಿದ್ದ ಎಂದು ನನ್ನ ಮಗಳು ಹೇಳಿದಾಗ ನನಗೆ ಆಘಾತವಾಯಿತು. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಬಾಲಕಿಯ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.










