ಗುರುಗ್ರಾಮ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಫೋಟೋಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ನಿನ್ನೆ ಭೋಜ್ಪುರಿ ಗಾಯಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಬಿಹಾರ ಮೂಲದ ಅಭಿಷೇಕ್ (21) ಎಂದು ಗುರುತಿಸಲಾಗಿದ್ದು, ಆತನನ್ನು ಭೋಜ್ಪುರಿ ಗಾಯಕ ಬಾಬುಲ್ ಬಿಹಾರಿ ಎಂದೂ ಗುರುತಿಸಲಾಗಿದೆ. ಆತ ತನ್ನ ಯೂಟ್ಯೂಬ್ ಚಾನೆಲ್ನಲ್ಲಿ 27,000ಕ್ಕೂ ಹೆಚ್ಚು ಫಾಲೋವರ್ಗಳನ್ನು ಹೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಆರೋಪಿಯು ಎರಡು ವರ್ಷಗಳ ಹಿಂದೆ ರಾಜೀವ್ ನಗರ ಪ್ರದೇಶದಲ್ಲಿ ವಾಸವಾಗಿದ್ದ 13 ವರ್ಷದ ಬಾಲಕಿಗೆ ಆಮಿಷ ಒಡ್ಡಿದ್ದ. ಆಕೆಯೊಂದಿಗೆ ಸ್ನೇಹ ಬೆಳೆಸಿ ಬಳಿಕ ಆಕೆಯನ್ನು ಹೋಟೆಲ್ ರೂಮಿಗೆ ಕರೆದೊಯ್ದು ಅತ್ಯಾಚಾರವೆಸಗಿ ಆಕೆಯ ಫೋಟೋಗಳನ್ನು ತೆಗೆದಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ನಂತರ ಅಪ್ರಾಪ್ತ ಬಾಲಕಿ ಆರೋಪಿಯಿಂದ ದೂರ ಉಳಿದಿದ್ದು, ಆತನ ಬಗ್ಗೆ ಯಾರಿಗೂ ಹೇಳಿರಲಿಲ್ಲ. ಆರೋಪಿಯು ಕೆಲವು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಯ ಚಿತ್ರಗಳನ್ನು ತನ್ನ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆ ಚಿತ್ರಗಳನ್ನು ನೋಡಿದ ನಂತರ, ಸಂತ್ರಸ್ತೆಯ ಕುಟುಂಬದವರು ಬಾಲಕಿಯನ್ನು ಪ್ರಶ್ನಿಸಿದ್ದು, ನಂತರ ಆಕೆ ತನ್ನೊಂದಿಗಾದ ಘಟನೆಯನ್ನು ವಿವರಿಸಿದ್ದಾಳೆ. ಬಳಿಕ ಕುಟುಂಬದವರು ಬುಧವಾರ ಆಕೆಯನ್ನು ಪೊಲೀಸರ ಬಳಿ ಕರೆದೊಯ್ದಿದ್ದಾರೆ. ಸಂತ್ರಸ್ತೆಗೆ ಕೌನ್ಸಿಲಿಂಗ್ ಮಾಡಿದ ನಂತರ, ಆರೋಪಿಯ ವಿರುದ್ಧ ಸೆಕ್ಟರ್ 14 ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಂಡು ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವಕ್ತಾರ ಸುಭಾಷ್ ಬೊಕೆನ್ ತಿಳಿಸಿದ್ದಾರೆ.










